ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭ: ಪೂರ್ವ ಸಿದ್ಧತಾ ಸಭೆ
ಹಾನಗಲ್ 29: ಆ. 30 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಪ್ರಮುಖ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಲಹೆ-ಸೂಚನೆ ನೀಡಿದರು.
ತಾಲೂಕಿನ ಪ್ರತಿ ಗ್ರಾಪಂ ಕೇಂದ್ರ ಸ್ಥಾನಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಮೈಸೂರಿನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ನೇರ್ರಸಾರ ವೀಕ್ಷಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಚುನಾಯಿತ ಪ್ರತಿನಿಧಿಗಳು, ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳಿಗೆ ಆಹ್ವಾನ ನೀಡುವಂತೆ ಸೂಚಿಸಿದರು. ಎಲ್ಲೆಡೆ ಕಾರ್ಯಕ್ರಮಗಳು ಯಶಸ್ವಿಯಾಗುವಂತೆ ಕಾಳಜಿ ವಹಿಸಿ ಎಂದರು.
ಇನ್ನು ಹಾನಗಲ್ನ ಕುಮಾರೇಶ್ವರ ನಗರದ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ತಾಲೂಕಾ ಮಟ್ಟದ ಕಾರ್ಯಕ್ರಮ ಆಯೋಜಿಸುವ ಕುರಿತು ನಿರ್ಣಯಿಸಲಾಯಿತು. ಸಮಾರಂಭದಲ್ಲಿ ಪಾಲ್ಗೊಳ್ಳುವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕ ಮಾನೆ ಸೂಚನೆ ನೀಡಿದರು.
ತಾಲೂಕಾ ತಹಶೀಲ್ದಾರ್ ರವಿಕುಮಾರ ಕೊರವರ, ತಾಪಂ ಇಒ ಮಲ್ಲಿಕಾರ್ಜುನ ಸಾಲಿಮಠ, ಸಿಡಿಪಿಒ ರಂಗನಾಥ, ಬಿಇಒ ವಿ.ವಿ.ಸಾಲಿಮಠ, ಮುಖ್ಯಾಧಿಕಾರಿ ಜಗದೀಶ ವೈ.ಕೆ., ಯೋಜನಾಧಿಕಾರಿ ಶಿವಾನಂದ ಕ್ಯಾಲಕೊಂಡ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.