ಹಡಪದ ಹಪ್ಪಣ್ಣ ಜಯಂತಿ ಜು. 13ರಂದು: ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಬಳ್ಳಾರಿ 07: ಹಡಪದ ಅಪ್ಪಣ್ಣ ಜಯಂತಿಯನ್ನು ಇದೇ ಜು.13ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜಯಂತಿಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಕವಾಗಿ ನಿರ್ವಹಿಸಬೇಕು ಎಂದು ಎಡಿಸಿ ಪಿ.ಎಸ್.ಮಂಜುನಾಥ ಅವರು ಸೂಚನೆ ನೀಡಿದರು.
ಜು.13ರಂದು ಬೆಳಗ್ಗೆ 11ಕ್ಕೆ ವೇದಿಕೆ ಕಾರ್ಯಕ್ರಮ ರಾಘವ ಕಲಾಮಂದಿರದಲ್ಲಿ ನಡೆಯಲಿದ್ದು,ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಲಿದ್ದು,ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರು,ಶಾಸಕರು ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಹಡಪದ ಅಪ್ಪಣ್ಣ ಅವರ ಕುರಿತು ಸಂಪನ್ಮೂಲ ವ್ಯಕ್ತಿಯೊಬ್ಬರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಇದಕ್ಕೂ ಮುಂಚೆ ಬೆಳಗ್ಗೆ 9:30ಕ್ಕೆ ಮೆರವಣಿಗೆಯು ನಗರದ ಎಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭವಾಗಲಿದ್ದು,ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ ಎಂದರು.
ಮೆರವಣಿಗೆ, ವೇದಿಕೆ, ಆಹಾರ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಮತ್ತು ಯಾವುದೇ ಲೋಪಗಳಿಗೆ ಅಸ್ಪದ ನೀಡದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ ಅವರು ಶಾಲಾ-ಕಾಲೇಜುಗಳಿಗೆ ಹಾಗೂ ಸಂಚಾರಿ ವಾಹನಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ಧಲಿಂಗೇಶ್ ರಂಗಣ್ಣನವರ್ ಅವರು ಕಾರ್ಯಕ್ರಮದ ರೂಪುರೇಷೆಗಳ ಕುರಿತು ವಿವರಿಸಿದರು.ಸಮುದಾಯದ ಮುಖಂಡರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಇದ್ದರು.