ರಾಷ್ಟ್ರೀಯ

ಹರಿಯಾಣದಲ್ಲಿ ಕ್ಯಾನ್ಸರ್ ಪ್ರಕರಣಗಳ ಏರಿಕೆ; 2025ರ ವೇಳೆಗೆ ಭಾರತದಲ್ಲಿ ವಾರ್ಷಿಕ ಕ್ಯಾನ್ಸರ್ ಭಾರ 15.7 ಲಕ್ಷಕ್ಕೆ ಏರಿಕೆ ಸಾಧ್ಯತೆ

ಹರಿಯಾಣದಲ್ಲಿ ಕ್ಯಾನ್ಸರ್ ಪ್ರಕರಣಗಳ ಏರಿಕೆ; 2025ರ ವೇಳೆಗೆ ಭಾರತದಲ್ಲಿ ವಾರ್ಷಿಕ ಕ್ಯಾನ್ಸರ್ ಭಾರ 15.7 ಲಕ್ಷಕ್ಕೆ ಏರಿಕೆ ಸಾಧ್ಯತೆ

ಪಂಚಕುಲ, ಆ. 3: ಹರಿಯಾಣ, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ದೇಶದ ಒಟ್ಟು ವಾರ್ಷಿಕ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 2025ರ ವೇಳೆಗೆ ಸುಮಾರು 15.7 ಲಕ್ಷಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಸಭೆಗೆ ಮಾಹಿತಿ ನೀಡಿದೆ.

ರಾಜ್ಯಸಭೆಯಲ್ಲಿ ಕೇಳಲಾದ ಅನ್‌ಸ್ಟಾರ್ಡ್ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಪ್ರತಾಪರಾವ್ ಜಾಧವ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮ (ಎನ್‌ಸಿಆರ್‌ಪಿ) ಸಿದ್ಧಪಡಿಸಿರುವ ಅಂದಾಜಿನ ಪ್ರಕಾರ, ದೇಶದಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 2021ರಲ್ಲಿ 14,26,447 ಇದ್ದದ್ದು 2025ರ ವೇಳೆಗೆ 15,69,793ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ. ಇದು ಐದು ವರ್ಷಗಳಲ್ಲಿ ಸುಮಾರು ಶೇ.10ರಷ್ಟು ಹೆಚ್ಚಳವಾಗಿದೆ.

ಉತ್ತರ ಭಾರತದ ರಾಜ್ಯಗಳ ಪೈಕಿ ಪಂಜಾಬ್‌ನಲ್ಲಿ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚು ಇರಲಿದೆ ಎಂದು ಅಂದಾಜಿಸಲಾಗಿದ್ದು, 2021ರಲ್ಲಿ 39,521 ಇದ್ದ ವಾರ್ಷಿಕ ಪ್ರಕರಣಗಳು 2025ರ ವೇಳೆಗೆ 43,196ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಹರಿಯಾಣದಲ್ಲಿ ಇದೇ ಅವಧಿಯಲ್ಲಿ ಕ್ಯಾನ್ಸರ್ ಪ್ರಕರಣಗಳು 30,015ರಿಂದ 33,395ಕ್ಕೆ ಹೆಚ್ಚಾಗುವ ಸಾಧ್ಯತೆಯಿದ್ದು, ದೆಹಲಿಯಲ್ಲಿ 25,969ರಿಂದ 29,238ಕ್ಕೆ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಪ್ರಕರಣಗಳು 13,060ರಿಂದ 14,493ಕ್ಕೆ ಮತ್ತು ಹಿಮಾಚಲ ಪ್ರದೇಶದಲ್ಲಿ 8,978ರಿಂದ 9,761ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಹಿಂದಿನ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ (ಆರ್‌ಸಿಸಿ) ಯೋಜನೆ ಈಗ ಜಾರಿಯಲ್ಲಿಲ್ಲ ಎಂದು ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ಪ್ರಸ್ತುತ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ (ಎನ್‌ಪಿ-ಎನ್‌ಸಿಡಿ) ಅಡಿಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಬಲಪಡಿಸುವ ಯೋಜನೆಯ ಮೂಲಕ ಕ್ಯಾನ್ಸರ್ ಆರೈಕೆ ಮೂಲಸೌಕರ್ಯವನ್ನು ವಿಸ್ತರಿಸಲಾಗುತ್ತಿದೆ.

ಈ ಯೋಜನೆಯಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಗಳು (ಎಸ್‌ಸಿಐ) ಮತ್ತು ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು (ಟಿಸಿಸಿಸಿ) ಸ್ಥಾಪಿಸಲು ಕೇಂದ್ರ ಸರ್ಕಾರ ನೆರವು ನೀಡುತ್ತಿದೆ.

ದೇಶಾದ್ಯಂತ ಇದುವರೆಗೆ 39 ಸಂಸ್ಥೆಗಳಿಗೆ ಅನುಮೋದನೆ ನೀಡಲಾಗಿದ್ದು, ಅವುಗಳಲ್ಲಿ 19 ರಾಜ್ಯ ಕ್ಯಾನ್ಸರ್ ಸಂಸ್ಥೆಗಳು ಮತ್ತು 20 ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳು ಸೇರಿವೆ.

ಉತ್ತರ ಭಾರತದಲ್ಲಿ ಹರಿಯಾಣದ ಅಂಬಾಲಾ ಕ್ಯಾಂಟ್‌ನ ಸಿವಿಲ್ ಆಸ್ಪತ್ರೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಂಜಾಬ್‌ನ ಅಮೃತಸರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ರಾಜ್ಯ ಕ್ಯಾನ್ಸರ್ ಸಂಸ್ಥೆ ಹಾಗೂ ಫಜಿಲ್ಕಾದ ಸಿವಿಲ್ ಆಸ್ಪತ್ರೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಿದೆ.

ದೆಹಲಿಯ ಲೋಕನಾಯಕ ಆಸ್ಪತ್ರೆ ತೃತೀಯ ಹಂತದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಮಂಡಿಯ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವೈದ್ಯಕೀಯ ಕಾಲೇಜಿನಲ್ಲಿ ಇಂತಹ ಕೇಂದ್ರಗಳಿವೆ.

ಜಮ್ಮು-ಕಾಶ್ಮೀರದಲ್ಲಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.

ದೇಶದಾದ್ಯಂತ ಜಿಲ್ಲಾ ಆಸ್ಪತ್ರೆ ಮಟ್ಟದಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಲಭ್ಯತೆಯನ್ನು ಹೆಚ್ಚಿಸಲು 524 ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು (ಡಿಸಿಸಿಸಿ) ಪ್ರಸ್ತುತ ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

ಆದರೆ ಹರಿಯಾಣ, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ ಅಥವಾ ಜಮ್ಮು-ಕಾಶ್ಮೀರದಲ್ಲಿ ಹೆಚ್ಚುವರಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಹೊಸ ಪ್ರಸ್ತಾವನೆಯನ್ನು ಸರ್ಕಾರದ ಉತ್ತರದಲ್ಲಿ ಉಲ್ಲೇಖಿಸಲಾಗಿಲ್ಲ.

ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ಪ್ರಮಾಣ, ಚಿಕಿತ್ಸಾ ಸೌಲಭ್ಯಗಳ ಲಭ್ಯತೆ ಮತ್ತು ಹಿಂದುಳಿದ ಜಿಲ್ಲೆಗಳಲ್ಲಿ ಹೆಚ್ಚುವರಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಗಳ ಕುರಿತು ಕೇಳಲಾದ ಪ್ರಶ್ನೆಗಳಿಗೆ ಸರ್ಕಾರ ಈ ಲಿಖಿತ ಉತ್ತರ ನೀಡಿದೆ.


ಸುದ್ದಿ ಓದಿ