ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಕೆಎಲ್‌ಇ ಎಫ್‌ಎಂನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ, ಆ.6: ಕೆಎಲ್‌ಇ ವೇಣುಧ್ವನಿ 90.4 ಎಫ್.ಎಂ., ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ನೇರ ದೂರವಾಣಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ಸೋನಾಲಿ ಬಿಜ್ಜರಗಿ ಭಾಗವಹಿಸಿ, ವಿಶ್ವ ಸ್ತನ್ಯಪಾನ ಸಪ್ತಾಹದ ಉದ್ದೇಶ ಮತ್ತು ಸ್ತನ್ಯಪಾನದ ಮಹತ್ವ ಕುರಿತು ಮಾಹಿತಿ ನೀಡಿದರು.
ಸ್ತನ್ಯಪಾನವು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದ್ದು, ಜನನದ ತಕ್ಷಣ ತಾಯಿಯ ಮೊದಲ ಹಾಲಾದ ಕೊಲಸ್ಟ್ರಮ್ ಅತ್ಯಂತ ಪೌಷ್ಟಿಕವಾಗಿರುತ್ತದೆ. ಇದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಪ್ರಯೋಜನಕಾರಿ ಎಂದು ಅವರು ವಿವರಿಸಿದರು. ಇದೇ ವೇಳೆ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ಶ್ರೋತೃಗಳು ದೂರವಾಣಿ ಮೂಲಕ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮವನ್ನು ವೇಣುಧ್ವನಿ ಎಫ್.ಎಂ.ನ ಕಾರ್ಯಕ್ರಮ ನಿರ್ವಾಹಕಿ ಮಣಿಷಾ ಪಿ.ಎಸ್. ಹಾಗೂ ಮಂಜುನಾಥ ಪೈ ನಿರೂಪಿಸಿದರು.