ನಾನು ಟಿಕೇಟ್ಗೆ ಪ್ರಬಲ ಆಕಾಂಕ್ಷಿ: ಕಳ್ಳಿಮನಿ
ತಾಳಿಕೋಟಿ: ಈ ಬಾರಿ ದೇ.ಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣ ಇರುವದರಿಂದ ಸಹಜವಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಮತಗಳು ಹೆಚ್ಚಾಗಿದ್ದು ಈ ಕೋಟಾದಡಿಯಲ್ಲಿ ನಾನು ಟಿಕೆಟ್ಗೆ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಜಿ.ಪಂ. ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ಸುಜಾತಾ ಕಳ್ಳಿಮನಿ ಹೇಳಿದರು.
ಇತ್ತೀಚೆಗೆ ತಾಲೂಕಿನ ಮಸ್ಕನಾಳ, ಮೈಲೇಶ್ವರ ಹಾಗೂ ಬ. ಸಾಲವಾಡಗಿ ಗ್ರಾಮಗಳಲ್ಲಿ ಪಕ್ಷ ಸಂಘಟನೆ ಪ್ರಯುಕ್ತ ಜನ ಸಂಪರ್ಕ ಸಭೆಗಳನ್ನು ನಡೆಸಲು ಆಗಮಿಸಿದ ಸಂದರ್ಭದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿದರು.
ದೇ.ಹಿಪ್ಪರಗಿ ಮತಕ್ಷೇತ್ರ ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದೆ ಕಳೆದ ಚುನಾವಣೆಯಲ್ಲಿ ಕಾರಣಾಂತರಗಳಿಂದ ಸ್ವಲ್ಪು ಹಿನ್ನಡೆಯಾಗಿ ವ್ಯತಿರಿಕ್ತ ಫಲಿತಾಂಶ ಬಂದಿದೆ. ಆದರೆ, ಈ ಬಾರಿ ನಮ್ಮ ಪಕ್ಷದ ಎಲ್ಲ ಮುಖಂಡರ ಹಾಗೂ ಕಾರ್ಯಕರ್ತರ ಸಾಂಘಿಕ ಪ್ರಯತ್ನದಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ನಿರಾತಂಕವಾಗಿ ಗೆಲುವು ಸಾಧಿಸಲಿದ್ದಾರೆ, ಬಿಜೆಪಿ ದುರಾಡಳಿತಕ್ಕೆ ಬೇಸತ್ತಿರುವ ರಾಜ್ಯದ ಜನತೆ ಅವರನ್ನು ಅಧಿಕಾರದಿಂದ ಕಿತ್ತೊಗೆಯಲು ಈಗಾಗಲೇ ನಿರ್ಧರಿಸಿಯಾಗಿದೆ ಎಂದ ಅವರು ನಾನು ಜಿಲ್ಲಾ ಪಂಚಾಯತ ಅಧ್ಯಕ್ಷಯಾಗಿದ್ದ ಅವಧಿಯಲ್ಲಿ ಮಾಡಿದ ಕಾರ್ಯಗಳು ನನಗೆ ಶ್ರೀರಕ್ಷೆಯಾಗಲಿವೆ ಎಂದು ತಿಳಿಸಿದರು.
ಈ ಸಮಯದಲ್ಲಿ ಮುಖಂಡರಾದ ಸೋಮನಾಥ ಕಳ್ಳಿಮನಿ, ದೇವಮ್ಮ ಕುರಿ, ಮುತ್ತು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.