ಕೊರ್ಲಗುಂದಿಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
ಬಳ್ಳಾರಿ 14: ತಾಲೂಕಿನ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾರ್ವಜನಿಕ ವಿತರಣೆ ವ್ಯವಸ್ಥೆ (ಪಡಿತರ) ಅಕ್ಕಿಯನ್ನು ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.ಗ್ರಾಮದ ಹಾಲು ಬಸವೇಶ್ವರ ದೇವಸ್ಥಾನದ ಸಮೀಪದ ಖಾಲಿ ಜಾಗದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ವೇಳೆ ವಿವಿಧ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 27.40 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ?63,480 ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಬಡಜನರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬೇರೆಡೆ ಸಾಗಣೆ ಮಾಡಲು ಯತ್ನಿಸಲಾಗುತ್ತಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಅಕ್ಕಿ ಎಲ್ಲಿಂದ ತರಲಾಗಿತ್ತು, ಇದರಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಹಾಗೂ ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿತ್ತು ಎಂಬ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.ಈ ಕಾರ್ಯಾಚರಣೆಯಲ್ಲಿ ಮೋಕಾ ಪೊಲೀಸ್ ಠಾಣೆಯ ಸಿಬ್ಬಂದಿ ಬಸವರಾಜ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಕರಣ ಸಂಬಂಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಸರ್ಕಾರದ ಪಡಿತರ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.