ಗುಡುಗು, ಸಿಡಿಲು ಬಡಿತ: ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು
ಕೊಪ್ಪಳ ಮೇ 23 :ಗುಡುಗು, ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳ ಸಂದರ್ಭದಲ್ಲಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ)ಯ ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿ ತಿಳಿಸಿದ ನಿಯಮಗಳನ್ನು ಸಾರ್ವಜನಿಕರು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಲಹೆಗಳನ್ನು ಪಾಲನೆ ಮಾಡಬೇಕು. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಕಾಮನ್ ಅಲಟಿಂರ್ಗ್ ಪ್ರೋಟೋಕಾಲ್ (ಸಿ.ಎ.ಪಿ) ಮುಖಾಂತರ ಬರುವ ಮಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಹಾಗೂ ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಸೂಕ್ತ. ಗುಡುಗು, ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರ ಕಾಯ್ದುಕೊಳ್ಳಬೇಕು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು.
ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ. ಅರಣ್ಯ ಪುದೇಶದಲ್ಲಿದ್ದರೆ ಸಣ್ಣ ಮತ್ತು ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯಬೇಕು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಯಾವುದೇ ಅವಶೇಷಗಳನ್ನು ತೆಗೆದುಹಾಕಬೇಕು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು. ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪಯಾಣ ಮುಂದೂಡಬೇಕು.
ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು. ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರಬೇಕು. ಅರಣ್ಯ, ಪುದೇಶದಿಂದ ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು ಹಾಗೂ ಮಿಂಚಿನ ಹೊಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಯಿರುತ್ತದೆ ಎನ್ನುವ ಕೆಲವು ಪ್ರಮುಖ ಸಲಹೆಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಜಿಲ್ಲೆಯ ಸಾರ್ವಜನಿಕರು ಅರಿಯಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದ್ದಾರೆ.