ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಿ: ವಿ.ಎಸ್. ಶಿವಶಂಕರ್ ಆಗ್ರಹ
ಬಳ್ಳಾರಿ 26: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದರೂ, ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸದೆ ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರಗಳು ದಲಿತ ಮತ್ತು ಶೋಷಿತ ಸಮುದಾಯಗಳಿಗೆ ವಂಚಿಸಿವೆ ಎಂದು ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಹಾಗೂ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ವಿ.ಎಸ್. ಶಿವಶಂಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಅವರು ಇಂದು ದಲಿತ ಹಕ್ಕುಗಳ ಸಮಿತಿ ಹಾಗೂ ಮಾನವ ಬಂಧುತ್ವ ವೇದಿಕೆ ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಕಾಲದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು ಮಾತನಾಡಿ,ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಚುನಾವಣೆ ದೃಷ್ಟಿಯಿಂದ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತೇ ವಿನಃ, ಅದಕ್ಕೆ ಸೂಕ್ತ ಸಂವಿಧಾನಾತ್ಮಕ ರಕ್ಷಣೆ ನೀಡಲಿಲ್ಲ.
ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸದೆ ದಲಿತ ಸಮುದಾಯಕ್ಕೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ ಅವರು, ಕೂಡಲೇ ಕೇಂದ್ರ ಸರ್ಕಾರವು ಈ ಹೆಚ್ಚಳವನ್ನು 9ನೇ ಶೆಡ್ಯೂಲ್‌ಗೆ ಸೇರಿಸುವಂತೆ ಕ್ರಮ ಕೈಗೊಳ್ಳಲು ಹಾಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕಾನೂನಾತ್ಮಕ ಹಾಗೂ ರಾಜಕೀಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗೆ ಶೇ. 17, ಪರಿಶಿಷ್ಟ ಪಂಗಡಕ್ಕೆ ಶೇ. 7 ಹಾಗೂ ಹಿಂದುಳಿದ ವರ್ಗಗಳಿಗೆ ಶೇ. 32 ರಂತೆ ಒಟ್ಟು ಶೇ. 56 ರಷ್ಟು ಮೀಸಲಾತಿಯನ್ನು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸುವ ಮೂಲಕ ನ್ಯಾಯಯುತ ರಕ್ಷಣೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಧರಣಿ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಿಸಲಾಯಿತು. ಪ್ರತಿಭಟನೆಯಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಗನಕಲ್ಲು ವಿಜಯಕುಮಾರ್, ಹಿರಿಯ ವಕೀಲರಾದ ಬಾದಾಮಿ ಶಿವಲಿಂಗ ನಾಯಕ, ಮೀನಳ್ಳಿ ವೆಂಕಟೇಶ್, ಸಂಗನಕಲ್ಲು ಗಂಗಾಧರ, ದುರ್ಗಪ್ಪ ತಳವಾರ್ ಹುಸೇನಪ್ಪ ದೇವದಾಸಿ ವಿಮೋಚನಾ ಸಂಘದ ದುರ್ಗಮ್ಮ, ಕಚ್ಚೆಡ್ ತಿಪ್ಪಯ್ಯ ರಾಮಣ್ಣ ಸೇರಿದಂತೆ ಇತರರಿದ್ದರು.