ವೇತನ ಭತ್ತೆಗಳ ಪರಿಷ್ಕರಣೆಗೆ ಆಗ್ರಹಿಸಿ ಮಾರ್ಚ್ 1ರಿಂದ ಆನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ ಶಿವಾಜಿ ರಾವ್ ಹೇಳಿಕೆ
ಬಳ್ಳಾರಿ 23: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ 2 ಲಕ್ಷ 40 ಸಾವಿರ ನೌಕರರಿದ್ದಾರೆ. ಪಂಜಾಬ್, ರಾಜಸ್ಥಾನ, ಛತ್ತೀಸ್ ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನಪಿಎಸ್ ರದ್ದುಪಡಿಸಿ, ಓಪಿಎಸ್ ಯೋಜನೆ ಜಾರಿಗೊಳಿಸಿದೆ.
ಅದೇ ರೀತಿಯಾಗಿ 5 ಲಕ್ಷದ 40 ಸಾವಿರ ನಿವೃತ್ತ ನೌಕರರು, 200ಕ್ಕೂ ಹೆಚ್ಚು ನಿವೃತ್ತ ನೌಕರರ ಸಂಘಗಳು ಬೆಂಬಲ ವ್ಯಕ್ತಪಡಿದ್ದಾರೆ. ಪೊಲೀಸ್ ಇಲಾಖೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಗೈರು ಅಂಶದಲ್ಲಿ ಕಪ್ಪು ಬಟ್ಟೆ ಧರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು. ಅವರು, ಫೆ.21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಆನಿರ್ಧಿಷ್ಟವಧಿ ಮುಷ್ಕರಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022ರ ಜುಲೈ 1 ರಂದು ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು. ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು. ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅ ನಿರ್ದಿಷ್ಟವಧಿ ಮುಷ್ಕರ’ ಕ್ಕೆ ಕರೆ ನೀಡಲು ನಿರ್ಣಯ ಕೈಗೊಂಡಿದೆ ಎಂದರು.
ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಆಧೀನಕ್ಕೊಳಪಡುವ ನೌಕರರಿಗೆ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ. 40ಅ ಫಿಟ್ಮೆಂಟ್ ಸೌಲಭ್ಯವನ್ನು ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು. ರಾಜ್ಯದ, ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು, ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್ ಘಡ, ಜಾಖಂರ್ಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.
ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಆ ನಿರ್ಧಷ್ಟವಧಿ ಮುಷ್ಕರವನ್ನು ಬೆಂಬಲಿಸುವುದೊಂದರಿಗೆ ಯಶಸ್ವಿಗೊಳಿಸಲು ಬಳ್ಳಾರಿ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಮನವಿ ಮಾಡಿದೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಜಿ. ಕೆ.ರಾಮಕೃಷ್ಣ ಜಿಲ್ಲಾ ಕಾರ್ಯದರ್ಶಿ,ಬಿ.ನಾಗರಾಜ್, ಎಂ.ಎ.ಆಸೀಫ್, ಗುಂಡಪ್ಪನವರ ನಾಗರಾಜ, ಟಿ.ಗೀರೀಶ್ ಬಾಬು, ಎ.ನಿಂಗರಾಜರೆಡ್ಡಿ, ಕೆ.ಶಶಿಕಲಾ, ಎಸ್ಕೆ ರೆಹಮಾನ್, ಸಿಎ ಮಂಜುನಾಥ್, ಶ್ರೀನಿವಾಸ್ ರೆಡ್ಡಿ, ಬೋರಮ್ಮ ಕೆಂಭಾವಿ, ಬಿ.ಪಂಪನಗೌಡ, ಹರಿಪ್ರಸಾದ್ ಇತರರು ಭಾಗವಹಿಸಿದ್ದರು.