ಸ್ವಾತಂತ್ರ್ಯೋತ್ಸವ: ಶಿಸ್ತು, ಅಚ್ಚುಕಟ್ಟು ಪಥಸಂಚಲನಕ್ಕೆ ಆದ್ಯತೆ

ಸ್ವಾತಂತ್ರ್ಯೋತ್ಸವ: ಶಿಸ್ತು, ಅಚ್ಚುಕಟ್ಟು ಪಥಸಂಚಲನಕ್ಕೆ ಆದ್ಯತೆ  Independence Day: Priority on disciplined and orderly march-past

ಗದಗ, ಆ.10: ಆ.15ರಂದು ಜಿಲ್ಲಾಮಟ್ಟದಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಎಲ್ಲ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಮುಖ್ಯ ಸಮಾರಂಭಕ್ಕೆ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸುವುದು, ಆಹ್ವಾನ ಪತ್ರಿಕೆಗಳನ್ನು ಸಮಯಕ್ಕೆ ತಲುಪಿಸುವುದು ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕು ಎಂದರು.  

ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯ ಸಮಾರಂಭದ ವೇದಿಕೆ ಹಾಗೂ ಆವರಣವನ್ನು ಆಕರ್ಷಕವಾಗಿ ಸಿದ್ಧಪಡಿಸುವಂತೆ ಸೂಚಿಸಿದರು. ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಆಹ್ವಾನಿತ ಅತಿಥಿಗಳಿಗೆ ಅಗತ್ಯ ಮೂಲಸೌಕರ್ಯ ಮತ್ತು ಸೌಲಭ್ಯ ಕಲ್ಪಿಸಬೇಕು. ಕ್ರೀಡಾಂಗಣದ ಸ್ವಚ್ಛತೆಗೆ ವಿಶೇಷ ಗಮನ ನೀಡಿ, ಕಾರ್ಯಕ್ರಮಕ್ಕೂ ಮುನ್ನ ಒಳಾಂಗಣ ಹಾಗೂ ಹೊರಾಂಗಣವನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು ಎಂದರು.  

ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ  

ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆತರುವ ಹಿನ್ನೆಲೆಯಲ್ಲಿ ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ವಿವಿಧ ಶಾಲೆಗಳಿಂದ ಆಗಮಿಸುವ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದು, ಕಾರ್ಯಕ್ರಮ ಮುಗಿದ ಬಳಿಕ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು ಎಂದರು.  ವಿದ್ಯಾರ್ಥಿಗಳ ಆಗಮನ ಮತ್ತು ನಿರ್ಗಮನ ಸಂದರ್ಭದಲ್ಲಿ ಶಿಕ್ಷಣ, ಪೊಲೀಸ್ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಸೂಚಿಸಿದರು.  

ಅಚ್ಚುಕಟ್ಟಾದ ಪಥಸಂಚಲನಕ್ಕೆ ಸಿದ್ಧತೆ  

ಸ್ವಾತಂತ್ರ್ಯೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಪಥಸಂಚಲನವನ್ನು ಶಿಸ್ತುಬದ್ಧವಾಗಿ ಹಾಗೂ ಆಕರ್ಷಕವಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪೊಲೀಸ್ ಇಲಾಖೆ, ಎನ್ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್‌ ಮತ್ತು ಗೈಡ್ಸ್‌, ಸೇವಾದಳ ಹಾಗೂ ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದು, ಎಲ್ಲ ತಂಡಗಳು ಸೂಕ್ತ ಪೂರ್ವಾಭ್ಯಾಸ ನಡೆಸಬೇಕು ಎಂದರು.  

ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನೂ ಅಚ್ಚುಕಟ್ಟಾಗಿ ಆಯೋಜಿಸುವಂತೆ ಸೂಚಿಸಲಾಯಿತು. ಸಚಿವರ ಸ್ವಾತಂತ್ರ್ಯೋತ್ಸವ ಸಂದೇಶದ ಸಿದ್ಧತೆ ಸೇರಿದಂತೆ ಎಲ್ಲ ಇಲಾಖೆಗಳು ತಮ್ಮ ಜವಾಬ್ದಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.  ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌., ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.