ಭಾರತದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿ: ದಮ್ಮೂರಮಠ

ಭಾರತದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿ: ದಮ್ಮೂರಮಠ  India's democracy is a model for the world: Dammuramatha


ತಾಳಿಕೋಟಿ 16: ಭಾರತವು ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದ್ದು, ಪ್ರಜಾಪ್ರಭುತ್ವದ ಆತ್ಮವೇ ನಮ್ಮ ಶ್ರೇಷ್ಠ ಸಂವಿಧಾನವಾಗಿದೆ ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿ ಆರಿ​‍್ಬ. ದಮ್ಮೂರಮಠ ಹೇಳಿದರು. ಪಟ್ಟಣದ  ಸಂಗಮೇಶ್ವರ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯವಾದಿ ಪ್ರಭಾಕರ ಗುಡಗುಂಟಿ ಮಾತನಾಡಿ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವು ಅತ್ಯಂತ ಶ್ರೇಷ್ಠ ಮಾರ್ಗದರ್ಶಕ ಗ್ರಂಥವಾಗಿದೆ. ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ವಿಶ್ವದ ಹಲವು ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಮರ​‍್ಕವಾಗಿ ಅಳವಡಿಸಿಕೊಳ್ಳದೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ ಭಾರತವು ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ. ನಾಗರಿಕರಾದ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಶಿಕ್ಷಕ ಸಂತೋಷ ಜಾಮಗೊಂಡಿ ಅವರು ಪ್ರಜಾಪ್ರಭುತ್ವದ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಎಂ.ಎಸ್‌. ಅರಿಕೇರಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ನಾವೆಲ್ಲರೂ ಒಗ್ಗೂಡಿ ಮಾಡಬೇಕಾಗಿದೆ ಎಂದು ಹೇಳಿದರು. ನಿಲಯ ಪಾಲಕ ಎನ್‌.ವಿ. ಕೋರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಕಚೇರಿಯ ಅಧೀಕ್ಷಕ ಶಿವಲಿಂಗಪ್ಪ ಹಚಡದ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಅನಸೂಯಾ ಚಲವಾದಿ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್‌.ವಿ. ಸಾವಳಸಂಗ, ಎಂ.ಕೆ.ಎಸ್‌. ಕರ್ಜಗಿ ಕಾನೂನು ಕಾಲೇಜಿನ ಪ್ರಾಚಾರ್ಯೆ ಅನಾಮಿಕಾ ಭರತ್ ಅಗರವಾಲ, ದಲಿತ ಮುಖಂಡರಾದ ಗೋಪಾಲ ಕಟ್ಟಿಮನಿ, ಬಸ್ಸು ಮಾದರ, ಸಮಾಜ ಕಲ್ಯಾಣ ಇಲಾಖೆಯ ಎಸ್‌.ಎನ್‌. ಮಲ್ಲಾಡೆ, ಎಸ್‌.ಎಂ. ಕಲಬುರ್ಗಿ, ಎಂ.ಎಸ್‌. ತಾಳಿಕೋಟಿ, ರೇಣುಕಾ ಪಾಟೀಲ, ವಿಶ್ವನಾಥ ಮಾಳಗಿ, ಮಂಜುನಾಥ ನರಸಳಗಿ, ರಾಮನಗೌಡ ಬಂಟನೂರ, ರಮೇಶ ಸಂಗಮ, ಶೇಕು ಲಮಾಣಿ, ರವಿ ಉಂಡಿಗೇರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.