ಜಲಜೀವನ್ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚನೆ
ಲೋಕದರ್ಶನ ವರದಿ
ವಿಜಯಪುರ 06: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಟಾಸ್ಕ್ಫೋರ್ಸ್ನಡಿ ಬಿಡುಗಡೆಯಾದ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಕವಾಗಿ ಬಳಸಬೇಕು. ಅನಗತ್ಯವಾಗಿ ಹೊಸ ಕೊಳವೆಬಾವಿ ಕೊರೆಯುವುದನ್ನು ಕಡಿಮೆ ಮಾಡಿ, ಈಗಾಗಲೇ ಕೊರೆಯಲಾದ ಕೊಳವೆಬಾವಿಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯ 654 ಗ್ರಾಮಗಳ ಪೈಕಿ 379 ಗ್ರಾಮಗಳು ‘ಹರ್ ಘರ್ ಜಲ್’ ಆ್ಯಪ್ನಲ್ಲಿ ಪ್ರಮಾಣೀಕರಣಗೊಂಡಿದ್ದು, ಬಾಕಿ ಇರುವ 275 ಗ್ರಾಮಗಳ ಪ್ರಮಾಣೀಕರಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ 4.64 ಲಕ್ಷ ಮನೆಗಳ ಪೈಕಿ 4.16 ಲಕ್ಷ ಮನೆಗಳಿಗೆ ಈಗಾಗಲೇ ಜಲಜೀವನ್ ಮಿಷನ್ನಡಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಮನೆಗಳಿಗೂ ಡಿಸೆಂಬರ್ 2026ರೊಳಗೆ ಕಡ್ಡಾಯವಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಿದರು.
ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿ ಕಾಮಗಾರಿಯ ವೇಗ ಹೆಚ್ಚಿಸಬೇಕು.
ಗುತ್ತಿಗೆದಾರರು ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳು ಸಮನ್ವಯದಿಂದ ಕಾರ್ಯಯೋಜನೆ ರೂಪಿಸಿ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆನಂದ ಪ್ರಕಾಶ್ ಮೀನಾ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳು, ಜಲಧಾರೆ ಯೋಜನೆಯ ಪಿಎಂಸಿ ತಂಡದವರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.