ಶಾಲಾ-ಕಾಲೇಜುಗಳ ಸುತ್ತಮುತ್ತ ನಿಗಾವಹಿಸಿ ಸೂಚನೆ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಶಾಲಾ-ಕಾಲೇಜುಗಳ ಸುತ್ತಮುತ್ತ ನಿಗಾವಹಿಸಿ ಸೂಚನೆ -ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಾವೇರಿ 11: ಶಾಲಾ-ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಶಾಲಾ-ಕಾಲೇಜು ಸಮೀಪದ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಹೆಚ್ಚಿನ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿಯಮಾನುಸಾರ ಆಯಾ ಶಾಲಾ-ಕಾಲೇಜುಗಳ ವ್ಯಾಪ್ತಿಯ ಸ್ಥಳೀಯ ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಶಾಲಾ-ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ತಡೆಗೆ ಕ್ರಮಕೈಗೊಳ್ಳಬೇಕು. ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮಾಡಬೇಕು ಹಾಗೂ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಹಾಗೂ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ತಂಬಾಕು ಮಾರಾಟಗಾರರಿಗೆ ನಿಯಮನುಸಾರ ಪ್ರತ್ಯೇಕ ಪರವಾನಗಿ ನೀಡಬೇಕು ಎಂದು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದರ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ಸತತವಾಗಿ ಅರಿವು ಮೂಡಿಸಬೇಕು. ತಾಲೂಕು ಮಟ್ಟದಲ್ಲಿ ನಿಯಮಾನುಸಾರ ಸಭೆ ನಡೆಸಬೇಕು ಹಾಗೂ ಅಂಗಡಿಗಳ ಮೇಲೆ ಅನೀರೀಕ್ಷಿತ ದಾಳಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಾ.ಸಂತೋಷ ದಡ್ಡಿ ಅವರು ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್ ಮಾಹೆಯಿಂದ ಜೂನ್ ಮಾಹೆವರೆಗೆ 57ದಾಳಿ ನಡೆಸಿ, 379ಪ್ರಕರಣ ದಾಖಲಿಸಲಾಗಿದೆ ಹಾಗೂ ರೂ.34,300 ದಂಡ ಸಂಗ್ರಹಣೆ ಮಾಡಲಾಗಿದೆ. 985 ಪುರುಷ ಹಾಗೂ 147 ಮಹಿಳೆಯರು ಸೇರಿ 1132 ಜನರಿಗೆ ಆಪ್ತಸಮಾಲೋಚನೆ ನಡೆಸಲಾಗಿದೆ, ನಿಕೋಟಿನ್ ಗಮ್ಸ್ ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ. ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ತಂಬಾಕು ನಿಯಂತ್ರಣ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜಯಾನಂದ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ಪಾಟೀಲ, ಡಾ. ಚನ್ನಬಸಯ್ಯ ವಿರಕ್ತಮಠ, ಡಾ. ಸರಿತಾ, ಡಾ. ನೀಲೇಶ, ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.