ವಿಜಯಪುರ

ರೈತರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮಲ್ಲಿಕಾರ್ಜುನ ಕೆಂಗನಾಳ

ರೈತರ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮಲ್ಲಿಕಾರ್ಜುನ ಕೆಂಗನಾಳ


ವಿಜಯಪುರ ಸೆ.21: ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ಕಲ್ಪಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಎಚ್ಚರಿಸಿದರು.  

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಮಂಡಲದ ವಿಶೇಷ ಅಧಿವೇಶನವು ಕೇವಲ ಚರ್ಚೆಗೆ ಸೀಮಿತವಾಗದೆ, ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ಸ್ಪಷ್ಟ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  

ರೈತರ ಕೃಷಿ ಸಾಲ ಮನ್ನಾ, ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ಘೋಷಣೆ, ಬರಪೀಡಿತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ತುರ್ತು ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.  

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರದ ಛಾಯೆ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ತೀವ್ರಗೊಂಡಿದೆ. ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ನಿರ್ಧಾರ ಕೈಗೊಳ್ಳಬೇಕು ಎಂದರು.  

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ, ರೈತರ ಸಂಕಷ್ಟಗಳು ಹಾಗೂ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕು. ರಾಜಕೀಯ ಅಥವಾ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಕೋಮು ವಿಚಾರಗಳಿಗೆ ಅವಕಾಶ ನೀಡದೆ, ಜನರ ಸಮಸ್ಯೆಗಳಿಗೆ ಆಡಳಿತ ಮತ್ತು ವಿರೋಧ ಪಕ್ಷಗಳು ಒಮ್ಮತದಿಂದ ಸ್ಪಂದಿಸಬೇಕು ಎಂದು ಅವರು ಹೇಳಿದರು. 


ಸುದ್ದಿ ಓದಿ