ಎನ್‌ಎಸ್‌ಎಸ್ ಘಟಕದ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಎನ್‌ಎಸ್‌ಎಸ್ ಘಟಕದ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ  International Yoga Day celebration under NSS unit

ತಾಳಿಕೋಟಿ 21 : ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾನುವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಐಕ್ಯುಎಸಿ ಪ್ರಾಯೋಚಿತ ಎನ್‌ಎಸ್‌ಎಸ್ ಘಟಕದ ಅಡಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಆರ್‌. ಎಂ. ಬಂಟನೂರ ಅವರು ವಹಿಸಿದ್ದರು. ಮಹಾವಿದ್ಯಾಲಯದ ಎಲ್ಲಾ ಉಪನ್ಯಾಸಕರು ಹಾಗೂ ಬಿ.ಎಡ್‌. ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಯೋಗದ ಮಹತ್ವದ ಕುರಿತು ವಿಶೇಷ ಚರ್ಚೆ ನಡೆಸಲಾಯಿತು. ಡಾ. ಆರ್‌. ಎಂ. ಬಂಟನೂರ ಅವರು ಮಾತನಾಡಿ, ಯೋಗವು ನಮ್ಮ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದೆ ಎಂದು ತಿಳಿಸಿದರು. ಇಂದಿನ ಒತ್ತಡದ ಜೀವನದಲ್ಲಿ ಯೋಗವು ಮನಸ್ಸಿಗೆ ಶಾಂತಿ, ದೇಹಕ್ಕೆ ಚೈತನ್ಯ ಹಾಗೂ ಜೀವನಕ್ಕೆ ಸಮತೋಲನವನ್ನು ನೀಡುತ್ತದೆ ಎಂದು ಹೇಳಿದರು. ಉಪನ್ಯಾಸಕರು ಯೋಗದ ವಿವಿಧ ಆಯಾಮಗಳ ಕುರಿತು ಮಾಹಿತಿ ನೀಡಿದರು.

ನಿಯಮಿತ ಯೋಗಾಭ್ಯಾಸದಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ಅನೇಕ ರೋಗಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಲಾಯಿತು.ಈ ಸಂದರ್ಭದಲ್ಲಿ ಕೆಲವು ಪ್ರಶಿಕ್ಷಣಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ ಎಂದು ತಿಳಿಸಿದರು. ಪ್ರತಿದಿನ ಯೋಗಾಭ್ಯಾಸ ಮಾಡುವ ಸಂಕಲ್ಪವನ್ನು ವ್ಯಕ್ತಪಡಿಸಿ, ಯೋಗದ ಮಹತ್ವವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ನಂತರ ಮಹಾವಿದ್ಯಾಲಯದ ಸರ್ವ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಉತ್ಸಾಹದಿಂದ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಸಮೂಹವಾಗಿ ಅಭ್ಯಾಸ ಮಾಡುವ ಮೂಲಕ ಯೋಗದ ಮಹತ್ವವನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಿದರು.