ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯ: ಡಾ. ಸುನೀಲ್ ಹಬೀಬ್
ಲೋಕದರ್ಶನ ವರದಿ
ಗದಗ, 6: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ಪ್ರಾದೇಶಿಕ ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕೋಟಿ ಹಾಗೂ ವಲಯ ಅರಣ್ಯಾಧಿಕಾರಿಗಳ ಕಚೇರಿ ಮತ್ತು ಗದಗ ಮೃಗಾಲಯದ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ರೇಬಿಸ್ ದಿನ’ ಹಾಗೂ ‘ವಿಶ್ವ ಹೃದಯ ದಿನ’ವನ್ನು ಗದಗ ಮೃಗಾಲಯದ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಫಿಜಿಷಿಯನ್ ಡಾ. ಸುನೀಲ್ ಹಬೀಬ್, “ವಿಶ್ವ ಹೃದಯ ದಿನವನ್ನು ಪರಿಣಾಮಕಾರಿಯಾಗಿ ಆಚರಿಸುವ ಮೂಲಕ ಜನರಲ್ಲಿ ಹೃದಯ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಪ್ರಮುಖ ಕರ್ತವ್ಯ” ಎಂದರು. ಆಧುನಿಕ ಜೀವನಶೈಲಿ, ಧೂಮಪಾನ, ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು ಹಾಗೂ ಆರೋಗ್ಯದ ಬಗ್ಗೆ ನಿರ್ಲಕ್ಷ್ಯದಿಂದ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿಯೂ ಹೃದಯಾಘಾತ ಮತ್ತು ಹೃದಯ ಸ್ತಂಭನದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.