ಜಾತಿ ತಾರತಮ್ಯ ನಿರ್ಮೂಲನೆ ಹಾಗೂ ಪ.ಜಾ, ಪ.ಪಂಗಡಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸುವುದ ಅಗತ್ಯ
ಲೋಕದರ್ಶನ ವರದಿ
ಹಾವೇರಿ:ನ.25: ನಾಗರಿಕ ಹಕ್ಕುಗಳ ಸಂರಕ್ಷಣೆ, ಜಾತಿ ತಾರತಮ್ಯ ನಿರ್ಮೂಲನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗರಾಜ್ ಎಲ್. ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮಹಿ1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಹಾಗೂ ನಿಯಮಗಳು ಮತ್ತು ವಿವಿಧ ಇಲಾಖೆಗಳ ಸೌಲಭ್ಯಗಳ ಕುರಿತು ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಹಾಗೂ ಕಮ್ಮಟ ಉದ್ಘಾಟಿಸಿ, ಡಾ.ಬಿ.ಆರ್.ಅಂಬೇಡ್ಕರ, ಡಾ.ಬಾಬು ಜಗಜೀವನರಾಂ ಹಾಗೂ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ನಾಗರಿಕ ಹಕ್ಕುಗಳು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೀಮಿತವಾಗಿಲ್ಲ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಹಕ್ಕುಗಳ ಅರಿವಿನ ಜೊತೆಗೆ ಕರ್ತವ್ಯಗಳ ತಿಳಿವಳಿಕೆ ಇರಬೇಕು. ಹಕ್ಕುಗಳ ಬಗ್ಗೆ ಮಾತನಾಡುವ ನಾವು ಕರ್ತವ್ಯಗಳನ್ನೂ ಸಮಾನ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಸಾರುತ್ತದೆ ಈ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಮನುಷ್ಯರ ರಕ್ತದಲ್ಲಿ ಜಾತಿಯ ಭೇದವಿಲ್ಲ, ತುರ್ತು ಸಂದರ್ಭಗಳಲ್ಲಿ ಜಾತಿ, ಧರ್ಮದ ಭೇದವಿಲ್ಲದೆ ಪರಸ್ಪರ ರಕ್ತದಾನ ಮಾಡುತ್ತೇವೆ. ಆದರೆ ಬದುಕಿನ ಇತರ ಸಂದರ್ಭಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವುದು ಮಾನವೀಯತೆಗೆ ವಿರುದ್ಧವಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾಗಿ ಬದುಕುವ ಹಕ್ಕಿದ್ದು, ಜಾತಿ ಆಧಾರದ ಮೇಲೆ ನಿಬಂರ್ಧಗಳನ್ನು ವಿಧಿಸುವ ಮನೋಭಾವ ಬದಲಾಗಬೇಕು ಎಂದು ಅಭಿಪ್ರಾಯಪಟ್ಟರು.