ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ. ವಿ.ವಿ. ಮಳಗಿ
ಲೋಕದರ್ಶನ ವರದಿ
ವಿಜಯಪುರ 13: ಶಿಕ್ಷಣವೆಂಬ ಅಸ್ತ್ರದ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಮರ್ಥ ಹಾಗೂ ಜ್ಞಾನವಂತ ಸಮಾಜ ನಿರ್ಮಿಸಬೇಕು ಎಂದು ಪ್ರೊ. ವಿ.ವಿ. ಮಳಗಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜಯಂತಿ ಅಂಗವಾಗಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿದ್ದರು. ಕೇವಲ 13ನೇ ವಯಸ್ಸಿನಲ್ಲಿಯೇ ಹತ್ತು ಭಾಷೆಗಳಲ್ಲಿ ಜ್ಞಾನ ಹೊಂದಿದ್ದ ಅವರು, ತಮ್ಮ ಮನೆಯಲ್ಲಿಯೇ ಶಿಕ್ಷಣ ಆರಂಭಿಸಿದ್ದರು. ಪತ್ರಿಕೋದ್ಯಮದಲ್ಲಿಯೂ ಆಸಕ್ತಿ ಹೊಂದಿದ್ದ ಅವರು 'ಆಜಾದ್' ಮತ್ತು 'ಅಲ್ ಬಿಲಾಲ್' ಪತ್ರಿಕೆಗಳನ್ನು ಪ್ರಾರಂಭಿಸಿದ್ದರು ಎಂದು ಸ್ಮರಿಸಿದರು.
ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಆಜಾದ್ ಅವರು ಶಿಕ್ಷಣಕ್ಕೆ ವಿಶೇಷ ಮಹತ್ವ ನೀಡಿದ್ದರು. 6ರಿಂದ 14 ವರ್ಷದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಆಶಯ ಹೊಂದಿದ್ದರು. ಸಾಕ್ಷರತೆ ಹೆಚ್ಚಿಸುವ ಉದ್ದೇಶದಿಂದ ವಯಸ್ಕರ ಶಿಕ್ಷಣಕ್ಕೂ ಪ್ರೋತ್ಸಾಹ ನೀಡಿದ್ದರು. ಉನ್ನತ ಶಿಕ್ಷಣ, ವಿಶ್ವವಿದ್ಯಾಲಯಗಳು, ಸಂಶೋಧನಾ ಕೇಂದ್ರಗಳು ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅಗತ್ಯವಾದ ಆರ್ಥಿಕ ನೆರವು ದೊರೆಯುವಂತೆ ಶ್ರಮಿಸಿದ್ದರು ಎಂದು ತಿಳಿಸಿದರು.
ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು. ಮಹಿಳೆಯರು ಕೇವಲ ಕುಟುಂಬದ ಬೆಳವಣಿಗೆಗೆ ಮಾತ್ರವಲ್ಲ, ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ. ಆದ್ದರಿಂದ ಪುರುಷರಷ್ಟೇ ಮಹಿಳೆಯರ ಶಿಕ್ಷಣಕ್ಕೂ ಆದ್ಯತೆ ನೀಡಬೇಕು ಎಂದು ಹೇಳಿದರು.
ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ರೂಪಾ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶಕಿ ಪ್ರೊ.ಜ್ಯೋತಿ ಉಪಾಧ್ಯೆ ಸ್ವಾಗತಿಸಿದರು. ನಾಯ್ಕೋಡಿ ನಿರೂಪಿಸಿದರು. ಡಾ.ಸೌಭಾಗ್ಯ ವಂದಿಸಿದರು.