ರೈತರ ಸಾಲ ಮನ್ನಾ, ಎಕರೆಗೆ 30 ಸಾವಿರ ಪರಿಹಾರಕ್ಕೆ ಜೆಡಿಎಸ್ ಆಗ್ರಹ
ಬಳ್ಳಾರಿ, ಸೆ.25: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಎಕರೆಗೆ ?30 ಸಾವಿರ ಪರಿಹಾರ ನೀಡಬೇಕು ಹಾಗೂ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಒತ್ತಾಯಿಸಿದರು.
ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ರಾಯಲ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಅಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮೀನಳ್ಳಿ ತಾಯಣ್ಣ, ಪ್ರಸಕ್ತ ವರ್ಷ ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಜನರು ಮತ್ತು ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ. ಕೇವಲ ಬರಪೀಡಿತ ತಾಲೂಕುಗಳನ್ನು ಘೋಷಿಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ತಕ್ಷಣ ಬರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ಘೋಷಿಸಿರುವ ಎಕರೆಗೆ ?2,500 ಪರಿಹಾರ ರೈತರ ಸಂಕಷ್ಟಕ್ಕೆ ಸಾಲದು. ರೈತರಿಗೆ ಎಕರೆಗೆ ?30 ಸಾವಿರ ಪರಿಹಾರ ನೀಡಬೇಕು. ಬರಪೀಡಿತ ಪ್ರದೇಶಗಳ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಗ್ರಾಮೀಣ ಭಾಗದ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವ ಜತೆಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗೆ ನೀರು ಮತ್ತು ಮೇವು ಬ್ಯಾಂಕ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಜೆಡಿಎಸ್ ವತಿಯಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅದ್ದಿಗೇರಿ ರಾಮಣ್ಣ, ಎಸ್ಸಿ ಮೋರ್ಚಾ ಅಧ್ಯಕ್ಷ ವಸಂತಕುಮಾರ್, ಯುವ ಘಟಕದ ಅಧ್ಯಕ್ಷ ಕಿರಣ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾ, ಮಾಧ್ಯಮ ಸಂಚಾಲಕ ರವಿಕುಮಾರ್ ಮೀನಳ್ಳಿ, ಜಮೀಲಾ, ಮೇಘರಾಜ್, ರಾಜು ಹೊನ್ನಳ್ಳಿ, ಬಸವ ಅಹಂಬಾವಿ, ರುದ್ರ್ಪ, ಚಾಗನೂರು ನಾಗರಾಜ್, ರಾಮಾಂಜಿನಿ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.