ನರಗುಂದ ತಾಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ

ನರಗುಂದ ತಾಲೂಕಿನಲ್ಲಿ ಜಾಬ್ ಕಾರ್ಡ್‌ ಮೇಳ Job Card Mela in Naragund Taluk

ನರಗುಂದ 14: ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ನರಗುಂದ ತಾಲೂಕಿನ 13 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್‌ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್‌ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ಚಿನಗುಂಡಿ ತಿಳಿಸಿದ್ದಾರೆ.  

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯ ಕೂಲಿಕಾರ್ಮಿಕರಿಗೆ ಯೋಜನೆಯಡಿ ಉದ್ಯೋಗ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.  

ಜಾಬ್ ಕಾರ್ಡ್‌ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರೀಶೀಲಿಸಿ, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್‌ ವಿತರಿಸಬೇಕು. ಜಾಬ್ ಕಾರ್ಡ್‌ ನವೀಕರಣ, ಇ-ಕೆವೈಸಿ ಪೂರ್ಣಗೊಳಿಸುವಿಕೆ ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದರು.  

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ಮೂಲಕ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಗ್ರಾಮಸಭೆ, ಜಾಗೃತಿ ಸಭೆಗಳನ್ನು ನಡೆಸುವುದರ ಜೊತೆಗೆ ಪೋಸ್ಟರ್ ಹಾಗೂ ಬ್ಯಾನರ್ಗಳ ಮೂಲಕ ಜಾಬ್ ಕಾರ್ಡ್‌ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.