ಕಂಪ್ಲಿ: ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ - ವೈದ್ಯಾಧಿಕಾರಿ ಡಾ. ರವೀಂದ್ರ ಕನಿಕೇರಿ
ಲೋಕದರ್ಶನ ವರದಿ
ಕಂಪ್ಲಿ 13: ಆಧುನಿಕ ಯುಗದಲ್ಲಿ ಅಪೌಷ್ಟಿಕ ಆಹಾರ ಸೇವನೆಯಿಂದಾಗಿ ಪ್ರತಿಯೊಬ್ಬರಲ್ಲೂ ವಿವಿಧ ರೋಗಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಜನರು ಪೌಷ್ಟಿಕ ಆಹಾರ ಸೇವನೆಯ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ವೈದ್ಯಾಧಿಕಾರಿ ಡಾ. ರವೀಂದ್ರ ಕನಿಕೇರಿ ಹೇಳಿದರು. ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವನದಲ್ಲಿ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಜನಸಂಖ್ಯೆ ಹೆಚ್ಚಾದಂತೆ ಜೀವನದ ಅವಧಿಯೂ ಹೆಚ್ಚಾಗುತ್ತಿದೆ. ಆದರೆ ಮನುಷ್ಯ ಆರೋಗ್ಯವಂತರಾಗಿದ್ದಾಗ ಮಾತ್ರ ಜೀವನ ಸುಂದರವಾಗಿರಲು ಸಾಧ್ಯ ಎಂದು ತಿಳಿಸಿದರು. ಬಳಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ವೀರೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.