ಕರವೇ ವತಿಯಿಂದ ನ.2ರಂದು ಕನ್ನಡ ಹಬ್ಬ
ದೇವರಹಿಪ್ಪರಗಿ 05: ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಎ.ಆರ್.ಕೆ ಫೌಂಡೇಶನ್ ವತಿಯಿಂದ ನವೆಂಬರ್ 2ರಂದು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಜನಪದ ಕಲಾ ತಂಡಗಳ ಮೆರವಣಿಗೆಯೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಹಾಗೂ ತಾಲೂಕು ಅಧ್ಯಕ್ಷ ರಹೀಮಾನ್ ಕನಕಲ್ ಮಾಹಿತಿ ನೀಡಿದರು.
ಕನ್ನಡ ರಾಜ್ಯೋತ್ಸವವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಜನಪದ ಪರಂಪರೆಯ ಬಗ್ಗೆ ಅಭಿಮಾನ ಬೆಳೆಸುವ ವೇದಿಕೆಯನ್ನಾಗಿ ಆಚರಿಸಲಾಗುವುದು. ವಿವಿಧ ಸಾಂಸ್ಕೃತಿಕ ಹಾಗೂ ಜನಪದ ಕಾರ್ಯಕ್ರಮಗಳ ಜೊತೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ವಿವಿಧ ಕಲಾವಿದರಿಂದ ಸಂಗೀತ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಕನ್ನಡಾಭಿಮಾನಿಗಳಿಗೆ ವಿಶೇಷ ಅನುಭವ ನೀಡಲಿವೆ. ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಗಣ್ಯರು, ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಕನ್ನಡದ ಹಬ್ಬವನ್ನು ಎಲ್ಲರೂ ಒಗ್ಗಟ್ಟಿನಿಂದ ಸಂಭ್ರಮದಿಂದ ಆಚರಿಸುವ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಗಣ್ಯರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪರದೇಶಿ ಮಠದ ಪ.ಪೂ. ಶಿವಯೋಗಿ ಮಹಾಸ್ವಾಮಿಗಳು, ಸಿಂದಗಿ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಸಿದ್ಧಾರ್ಥ ರೂಗಿ, ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ಧನಗೌಡ ಜಲಪೂರ ಸೇರಿದಂತೆ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.