ಕರ್ನಾಟಕ ಬಾಲವಿಕಾಸ ಅಕಾಡೆಮಿ: ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಲೋಕದರ್ಶನ ವರದಿ
ಮಕ್ಕಳ ಸುರಕ್ಷತೆ, ಊಟ-ವಸತಿ ವ್ಯವಸ್ಥೆಗೆ ಆದ್ಯತೆ ನೀಡಿ: ಅಡಿವೇಶ ಇಟಗಿ
ಬೆಳಗಾವಿ 29: ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮಕ್ಕಳ ಸುರಕ್ಷತೆ, ಊಟ, ವಸತಿ ಹಾಗೂ ಸಾರಿಗೆ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ ವೀಡಿಯೊ ಸಂವಾದ ಸಭಾಂಗಣದಲ್ಲಿ ಗುರುವಾರ (ಅ.29) ನಡೆದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಮೊಬೈಲ್ ಬಳಕೆಯ ವ್ಯಸನವನ್ನು ಕಡಿಮೆ ಮಾಡುವ ಉದ್ದೇಶದಿಂದ ಈಗಾಗಲೇ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಡಿಎಂಎಫ್ ವತಿಯಿಂದ 50 ಲಕ್ಷ ಅನುದಾನ ಬಳಸಿಕೊಂಡು ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.
ಅಂದಾಜು ಆಯವ್ಯಯ 2 ಕೋಟಿ ಅನುದಾನ ಬಳಕೆ ಮಾಡಲಿದ್ದು, ಮುಂದಿನ ದಿನಗಳಲ್ಲಿ ಸಭೆ ಕರೆದು ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜನೆಯ ನಿಗದಿತ ದಿನಾಂಕ ತಿಳಿಸಲಾಗುವುದು ಎಂದು ಅಡಿವೇಶ್ ಇಟಗಿ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಕನಿಷ್ಠ ಮೂರು ದಿನಗಳ ಕಾಲ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಆಂತರಿಕ ಸಮಿತಿಗಳನ್ನು ರಚಿಸಬೇಕು ಎಂದರು.
ಸಮ್ಮೇಳನದಲ್ಲಿ ಮಕ್ಕಳು ಪಾಲ್ಗೊಳ್ಳುವ ಕುರಿತು ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳ ಆದೇಶದಂತೆ ಕ್ರಮ ವಹಿಸಬೇಕು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಮಕ್ಕಳು ಹಾಗೂ ಸ್ಥಳೀಯ ಮಕ್ಕಳ ಸಂಖ್ಯೆಯನ್ನು ಆಧರಿಸಿ ಪ್ರತಿದಿನದ ಊಟ ಮತ್ತು ವಸತಿ ವ್ಯವಸ್ಥೆಗೆ ಅಗತ್ಯವಿರುವ ಅಂದಾಜು ಸಿದ್ಧಪಡಿಸಬೇಕು.
ಕಾರ್ಯಕ್ರಮಕ್ಕೆ ಆಗಮಿಸುವ ಮಕ್ಕಳು ಹಾಗೂ ಇತರರಿಗೆ ಅಲ್ಪಾಹಾರ ಮತ್ತು ಊಟದ ವ್ಯವಸ್ಥೆ ಕಲ್ಪಿಸುವುದರ ಜತೆಗೆ, ಬಾಲವಿಕಾಸ ಅಕಾಡೆಮಿಯಿಂದ ಅಗತ್ಯ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸಮ್ಮೇಳನಕ್ಕೆ ಆಗಮಿಸುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಿ, ಕಾರ್ಯಕ್ರಮದ ಎಲ್ಲ ಹಂತಗಳಲ್ಲಿಯೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನಕುಮಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಮೂರ್ತಿ, ಸುಮಿತ್ರಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.