ಎಸ್ಸಿ ಒಳ ಮೀಸಲಾತಿ ನೀತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಆ. 6 : ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಆಧರಿಸಿ ಪರಿಶಿಷ್ಟ ಜಾತಿಗಳಲ್ಲಿ (ಎಸ್ಸಿ) ಒಳ ಮೀಸಲಾತಿ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಜೂಡೋ ಬಂಜಾರ ಫೌಂಡೇಶನ್ (ಆರ್) ಪ್ರಧಾನ ಕಾರ್ಯದರ್ಶಿ ಖೇಮ್ ಸಿಂಗ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿ, ರಾಜ್ಯದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಆಯೋಗ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿತು.
ಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 2025ರ ಅಕ್ಟೋಬರ್ 16ರಂದು ನೀಡಿದ್ದ ಮಧ್ಯಂತರ ಆದೇಶಗಳು ಪ್ರಸ್ತುತ ಅರ್ಜಿಗೂ ಅನ್ವಯವಾಗಲಿವೆ ಎಂದು ನ್ಯಾಯಾಲಯ ತಿಳಿಸಿದೆ. ಆ ಮಧ್ಯಂತರ ಆದೇಶದ ಪ್ರಕಾರ, ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದಾದರೂ, ಮುಂದಿನ ಆದೇಶದವರೆಗೆ ಅಂತಿಮ ನೇಮಕಾತಿ ಆದೇಶಗಳನ್ನು ಹೊರಡಿಸುವಂತಿಲ್ಲ.
2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟವು 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಧಾರವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ಅರ್ಜಿದಾರರ ಪ್ರಕಾರ, ಈ ವರ್ಗೀಕರಣದಲ್ಲಿ ಅತಿ ಹಿಂದುಳಿದ 59 ಪರಿಶಿಷ್ಟ ಜಾತಿಗಳಿಗೆ ಶೇ.20ರಷ್ಟು ಮೀಸಲಾತಿ ನೀಡಲಾಗಿದ್ದು, ಉಳಿದ ಶೇ.80ರಷ್ಟು ಮೀಸಲಾತಿಯನ್ನು ಇತರೆ ನಾಲ್ಕು ಪರಿಶಿಷ್ಟ ಜಾತಿಗಳಿಗೆ ಹಂಚಿಕೆ ಮಾಡಲಾಗಿದೆ. ಈ ವರ್ಗೀಕರಣವು ಅನಿಯಮಿತವಾಗಿದ್ದು, ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಹಾಗೂ ಸಂವಿಧಾನಬಾಹಿರವಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಸಂವಿಧಾನದ ಪ್ರಕಾರ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸಮುದಾಯಗಳನ್ನು ಸೇರಿಸುವುದು, ಬದಲಾವಣೆ ಮಾಡುವುದು ಅಥವಾ ನಿರ್ದಿಷ್ಟಪಡಿಸುವ ಅಧಿಕಾರ ರಾಷ್ಟ್ರಪತಿಗಳಿಗೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಇಂತಹ ವರ್ಗೀಕರಣ ಬದಲಾಯಿಸುವ ಅಧಿಕಾರವಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.
ಸಚಿವ ಸಂಪುಟದ ನಿರ್ಧಾರ ಹಾಗೂ ಅದರ ಅನುಷ್ಠಾನಕ್ಕಾಗಿ ಹೊರಡಿಸಲಾದ ಸರ್ಕಾರದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ, 2022ರ ಡಿಸೆಂಬರ್ 28ಕ್ಕೂ ಮೊದಲು ಜಾರಿಯಲ್ಲಿದ್ದ ಮೀಸಲಾತಿ ವ್ಯವಸ್ಥೆಯ ಆಧಾರದ ಮೇಲೆ ನೇಮಕಾತಿ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಕೋರಲಾಗಿದೆ.
ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿದೆ.