ಲಿಂಗಾಯತ ಮಹಿಳಾ ಸಮಾಜದಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ
ಲೋಕದರ್ಶನ ವರದಿ
ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆಯಲಿ: ಡಾ. ಪ್ರಭಾಕರ ಕೋರೆ
ಬೆಳಗಾವಿ 16 : ಗಡಿಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನಾಡು-ನುಡಿಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ಕನ್ನಡ ಕಟ್ಟುವ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಕನ್ನಡಿಗರಲ್ಲಿ ಭಾಷಾಭಿಮಾನ ಬೆಳೆಸುವ ಜೊತೆಗೆ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ, ಪದ್ಮಶ್ರೀ ಡಾ. ಪ್ರಭಾಕರ ಕೋರೆ ಹೇಳಿದರು.
ನಗರದ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜದ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ, ಮಕ್ಕಳ ದಿನಾಚರಣೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗಡಿಭಾಗದಲ್ಲಿ ಕೆಎಲ್‌ಇ ಸಂಸ್ಥೆಯು ಕಳೆದ ಶತಮಾನದಿಂದಲೂ ಕನ್ನಡ ಕಟ್ಟುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನಾಡು-ನುಡಿಯ ಪೋಷಕರಾಗಿ ಕೆಎಲ್‌ಇ ಸಂಸ್ಥೆಯ ಸಪ್ತಋಷಿಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷೆ ನಿರಂತರವಾಗಿ ವಿಸ್ತರಿಸುತ್ತಾ ಹೋಗಬೇಕು. ಗಡಿಭಾಗದ ಕನ್ನಡಿಗರು ಅಭಿಮಾನದಿಂದ ಇಲ್ಲಿ ಬಾಳಿ ಬದುಕಬೇಕು ಎಂದು ಹೇಳಿದರು.
ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಜಾಗೃತಿಗಾಗಿ ಲಿಂಗಾಯತ ಮಹಿಳಾ ಸಮಾಜವು ಇನ್ನೂ ಹೆಚ್ಚಿನ ಸಾಂಸ್ಕೃತಿಕ ಹಾಗೂ ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ಕನ್ನಡದ ಕಂಪನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಕಾರ್ಯವಾಗಬೇಕು. ಕನ್ನಡದ ಸಾಂಸ್ಕೃತಿಕ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಗೊಳಿಸುವ ಸದುದ್ದೇಶದಿಂದಲೇ ಕನ್ನಡ ಭವನವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಹಾಗೂ ಆಶಾ ಕೋರೆ ದಂಪತಿಯನ್ನು ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೆ, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ, ನವದೆಹಲಿ ವತಿಯಿಂದ 'ಪರಮ ರತ್ನ' ಪ್ರಶಸ್ತಿ ಪಡೆದ ಡಾ. ಎಫ್.ವಿ. ಮಾನ್ವಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅವರು, ಡಾ. ಸುಜಾತಾ ಜಾಲಿ, ಲಿಂಗಾಯತ ಮಹಿಳಾ ಸಮಾಜದ ಸಂಸ್ಥಾಪಕಿ, ಗೌರವ ಅಧ್ಯಕ್ಷೆ ಶೈಲಜಾ ಬಿಂಗೆ, ಅಧ್ಯಕ್ಷೆ ರಾಜೇಶ್ವರಿ ಕಲೂತಿ, ಕಾರ್ಯದರ್ಶಿ ಶ್ರೀದೇವಿ ಅಂಟಿನ, ಸಹ ಕಾರ್ಯದರ್ಶಿ ಲಕ್ಷ್ಮೀ ಸಾನಿಕೊಪ್ಪ, ರತ್ನಪ್ರಭಾ ಬೆಲ್ಲದ, ಶೈಲಾ ಪಾಟೀಲ್, ಜ್ಯೋತಿ ಬದಾಮಿ, ಜಯಶೀಲಾ ಬ್ಯಾಕೋಡ , ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ, ರತ್ನಪ್ರಭಾ ಬೆಲ್ಲದ, ಯ.ರು. ಪಾಟೀಲ, ಜಯಶ್ರೀ ಬ್ಯಾಕೋಡ, ಜ್ಯೋತಿ ಬಾದಾಮಿ ಸೇರಿದಂತೆ ಸಮಾಜದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.