ವಿಜಯಪುರ

ಕೊಲ್ಹಾರ ಮಹಿಳೆಯರಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಅವಕಾಶ ನೀಡಲು ಆಗ್ರಹ

ಕೊಲ್ಹಾರ  ಮಹಿಳೆಯರಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಅವಕಾಶ ನೀಡಲು ಆಗ್ರಹ

ಕೊಲ್ಹಾರ 14 : ರಾಜ್ಯದ 6,000 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್‌ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ) ಮಹಿಳೆಯರಿಂದ ನೆರವೇರಿಸಲು ಅವಕಾಶ ಕಲ್ಪಿಸಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಪ್ರದೀಪ ಪಾಟೀಲ (ನಾಗರದಿನ್ನಿ) ಆಗ್ರಹಿಸಿದ್ದಾರೆ.  ಈ ಕುರಿತು ಪಂಚಾಯತ್ ರಾಜ್ ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿರುವ ಅವರು, ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳು, ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಪರವಾಗಿದೆ ಎಂಬುದನ್ನು ಕಾರ್ಯರೂಪದಲ್ಲಿ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಸ್ವಾತಂತ್ರ್ಯೋತ್ಸವದಂತಹ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಮಾಜದ ಕಟ್ಟಕಡೆಯ ವರ್ಗದ ಮಹಿಳೆಯರಿಗೆ ಧ್ವಜಾರೋಹಣದ ಗೌರವ ನೀಡುವುದರಿಂದ ಸಾಮಾಜಿಕ ನ್ಯಾಯದ ಸಂದೇಶ ಸಾರಿದಂತಾಗುತ್ತದೆ. ಗ್ರಾಮ ಪಂಚಾಯಿತಿಗಳ ಆಡಳಿತಾತ್ಮಕ ಚಟುವಟಿಕೆಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದ ಸಮುದಾಯಗಳ ಭಾಗವಹಿಸುವಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವುದು ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಕೂಡಲೇ ದಿನಾಂಕ ನಿಗದಿಪಡಿಸಿ, ಚುನಾಯಿತ ಪ್ರತಿನಿಧಿಗಳ ಮೂಲಕ ಗ್ರಾಮೀಣ ಆಡಳಿತ ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರದೀಪ ಪಾಟೀಲ ಒತ್ತಾಯಿಸಿದ್ದಾರೆ. 


ಸುದ್ದಿ ಓದಿ