ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರೆ್ಣ
ಬೆಳಗಾವಿ 16 : ಗ್ರಾಮೀಣ ಪ್ರದೇಶಗಳಲ್ಲಿ ಜಲಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೆರೆಗಳ ಪುನಶ್ಚೇತನ ಅತ್ಯಂತ ಮಹತ್ವದ ಕಾರ್ಯವಾಗಿದ್ದು, ಇದರಿಂದ ರೈತರು ಹಾಗೂ ಗ್ರಾಮಸ್ಥರಿಗೆ ದೀರ್ಘಕಾಲಿಕ ಪ್ರಯೋಜನ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಬೆನಕನಹಳ್ಳಿ ಪಟ್ಟಣ ಪಂಚಾಯಿತಿ, ಗ್ರಾಮದ ಪಂಚ ಕಮಿಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ’ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ 988ನೇ ಕೆರೆಯ ಬಾಗಿನ ಅರೆ್ಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ,
ನಾಮಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು. ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಜಲಸಂರಕ್ಷಣೆ, ಪರಿಸರ ಸಂರಕ್ಷಣೆ ಹಾಗೂ ಗ್ರಾಮೀಣಾಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಅಪಾರವಾಗಿದೆ.
ವಿಶೇಷವಾಗಿ ಗ್ರಾಮೀಣ ಭಾಗದ ಕೆರೆಗಳ ಪುನಶ್ಚೇತನದ ಮೂಲಕ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು, ಅಂತರ್ಜಲ ಮಟ್ಟ ವೃದ್ಧಿಸುವುದು ಮತ್ತು ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೆರೆಗಳು ಕೇವಲ ನೀರಿನ ಸಂಗ್ರಹ ತಾಣಗಳಲ್ಲ. ಅವು ಗ್ರಾಮೀಣ ಬದುಕಿನ ಜೀವನಾಡಿಯಾಗಿವೆ.