ಬೆಳಗಾವಿ

₹43.44 ಲಕ್ಷ ವೆಚ್ಚದಲ್ಲಿ ಸೋನೋಲಿ ಶಾಲೆ ನವೀಕರಣ: ನೂತನ ಕಟ್ಟಡ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್

₹43.44 ಲಕ್ಷ ವೆಚ್ಚದಲ್ಲಿ ಸೋನೋಲಿ ಶಾಲೆ ನವೀಕರಣ: ನೂತನ ಕಟ್ಟಡ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್

ಶಿಕ್ಷಣ, ಆರೋಗ್ಯ ಹಾಗೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ನ. 7: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ ₹43.44 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ನೂತನ ಕಟ್ಟಡವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ, ಗಟಾರ, ಶಾಲಾ ಕೊಠಡಿಗಳು, ಕಂಪೌಂಡ್‌ಗಳು ಹಾಗೂ ದೇವಾಲಯಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಆರೋಗ್ಯ ವ್ಯವಸ್ಥೆಯ ಸುಧಾರಣೆ, ಸಹಕಾರಿ ಸಂಘಗಳ ಕಟ್ಟಡ ನಿರ್ಮಾಣ ಹಾಗೂ ಯುವಕರಿಗಾಗಿ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಜನರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಉತ್ತಮ ವಾತಾವರಣ ಕಲ್ಪಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ನವೀಕರಣಗೊಂಡ ಶಾಲೆಯ ಸುಸಜ್ಜಿತ ತರಗತಿ ಕೊಠಡಿಗಳು ಹಾಗೂ ಸುಧಾರಿತ ಸೌಲಭ್ಯಗಳು ವಿದ್ಯಾರ್ಥಿಗಳ ಕಲಿಕೆಗೆ ಪ್ರೇರಣೆಯಾಗಲಿ. ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಯುವರಾಜ ಕದಂ, ಬಾಳು ದೇಸೂರಕರ್, ಮನೋಹರ್ ಬೆಳಗಾಂವ್ಕರ್, ರಘು ಖಂಡೇಕರ್, ಗುರುನಾಥ್ ಪಾಟೀಲ, ಪ್ರಕಾಶ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಪುಂಡಲೀಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮ ಪಂಚಾಯತ್ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ದಿ ಓದಿ