ವಿಜಯಪುರ

ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ನ್ಯಾಯಾಧೀಶ ಹರಿಶ ಎ.

ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ನ್ಯಾಯಾಧೀಶ ಹರಿಶ ಎ.
Law students play a significant role in conveying the ideals of the Constitution to the general publ

 ವಿಜಯಪುರ 29: ಸಂವಿಧಾನದ ಆಶಯಗಳನ್ನು ಅರಿತುಕೊಂಡು, ಸಮಾಜದ ಬಡವರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳಿಗೆ ನ್ಯಾಯ ದೊರಕಿಸುವಲ್ಲಿ ಕಾನೂನು ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ. ಅವರು ಅಭಿಪ್ರಾಯ ಪಟ್ಟರು.ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯನ್ನು ರಕ್ಷಿಸುವ ಮಹತ್ವದ ದಾಖಲೆಯಾಗಿದೆ. ಸಂವಿಧಾನದ ಆಶಯಗಳು ಕೇವಲ ನ್ಯಾಯಾಲಯಗಳಿಗೆ ಸೀಮಿತವಾಗದೆ ಸಮಾಜದ ಪ್ರತಿಯೊಂದು ಹಂತದಲ್ಲಿಯೂ ಅನುಷ್ಠಾನಗೊಳ್ಳಬೇಕು ಎಂದರು. ಸಂವಿಧಾನದ ಕಲಂ 39ಎ ಎಲ್ಲರಿಗೂ ಸಮಾನ ನ್ಯಾಯ ಹಾಗೂ ಉಚಿತ ಕಾನೂನು ನೆರವು ಒದಗಿಸುವ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರಗಳು ಮಹತ್ವದ ಕಾರ್ಯ ನಿರ್ವಹಿಸುತ್ತಿವೆ. ಕಾಲೇಜಿನಲ್ಲಿ ಕಾನೂನು ನೆರವು ಘಟಕವನ್ನು ಆರಂಭಿಸಿರುವುದು ಶ್ಲಾಘನೀಯವಾಗಿದ್ದು, ಕಾನೂನು ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಯ ನಡುವಿನ ಸೇತುವೆಯಾಗಿ ಅದು ಕಾರ್ಯನಿರ್ವಹಿಸಬೇಕು. ವಿದ್ಯಾರ್ಥಿಗಳು ಇದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಕಾನೂನು ಹಕ್ಕುಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.ಡಾ. ಬಿ.ಆರ್‌. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಯಲ್ಲಿ ಪಾಲ್ಗೊಂಡ ಮಹನೀಯರ ಕೊಡುಗೆಯನ್ನು ಸ್ಮರಿಸಿದ ಅವರು, ಕೇಶವಾನಂದ ಭಾರತಿ ಮತ್ತು ಮೇನಕಾ ಗಾಂಧಿ ಪ್ರಕರಣಗಳಂತಹ ಪ್ರಮುಖ ನ್ಯಾಯಾಂಗ ತೀಪುಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವುದು ಅಗತ್ಯವಾಗಿದೆ. ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ಪ್ರತಿಯೊಬ್ಬ ನಾಗರಿಕನು ತನ್ನ ಕರ್ತವ್ಯಗಳನ್ನೂ ಪಾಲಿಸಬೇಕು. ಇತರರ ಹಕ್ಕುಗಳನ್ನು ಗೌರವಿಸುವುದು, ಸಾಮಾಜಿಕ ಸಾಮರಸ್ಯ ಬೆಳೆಸುವುದು ಹಾಗೂ ನ್ಯಾಯ ಮತ್ತು ಸಮಾನತೆಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ವಿಜಯಪುರ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ ಸಂವಿಧಾನದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಜವಾಬ್ದಾರಿಯುತ ವಕೀಲರಾಗಿ ರೂಪುಗೊಳ್ಳಬೇಕು. ಮಾನವೀಯತೆ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯೊಂದಿಗೆ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.ಸಿಕ್ಯಾಬ್ ಎ.ಆರ್‌.ಎಸ್‌. ಇನಾಮದಾರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರಿಯಾಜ್ ಫಾರೂಖಿ ಮಾತನಾಡಿ, ಕಾನೂನು ಕ್ಷೇತ್ರದ ಹಿರಿಯ ನ್ಯಾಯವಾದಿಗಳು ಹಾಗೂ ಮಾರ್ಗದರ್ಶಕರೊಂದಿಗೆ ಸಂವಾದ ನಡೆಸುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆತಿರುವುದು ಸಂತೋಷದ ಸಂಗತಿಯಾಗಿದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನ ಮತ್ತು ವೃತ್ತಿಪರ ಬೆಳವಣಿಗೆಗೆ ಪೂರಕವಾಗುತ್ತವೆ. ಸಂವಿಧಾನದ ಪ್ರಸ್ತಾವನೆಯು ಅದರ ಆತ್ಮವಾಗಿದ್ದು, ರಾಷ್ಟ್ರದ ಆಶಯಗಳನ್ನು ಪ್ರತಿಬಿಂಬಿಸುತ್ತದೆ. ಸಂವಿಧಾನಾತ್ಮಕ ಮೌಲ್ಯಗಳು ಸರ್ವೋಚ್ಚ ಮತ್ತು ಉಚ್ಚ ನ್ಯಾಯಾಲಯಗಳಿಗೆ ಮಾತ್ರ ಸೀಮಿತವಾಗದೆ ಜಿಲ್ಲಾ ನ್ಯಾಯಾಲಯಗಳಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಜವಾಬ್ದಾರಿಯುತ ವೃತ್ತಿಪರರಾಗಿ ಬೆಳೆಯಬೇಕು ಎಂದು ಹೇಳಿದರು.  ಹಿರಿಯರು ರೂಪಿಸಿಕೊಟ್ಟ ಸಂವಿಧಾನದ ಮೌಲ್ಯಗಳನ್ನು ಮುಂದಿನ ಪೀಳಿಗೆಯೂ ಗೌರವಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಏಕತೆ, ಶಾಂತಿ ಮತ್ತು ಪ್ರಗತಿಯನ್ನು ಕಾಪಾಡುವಲ್ಲಿ ಸಂವಿಧಾನದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಆಶಿಸಿದರು. ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಹಾಗೂ ಬೆಂಗಳೂರಿನ ಬಸವ ಪರಿಷತ್ ಪ್ರಶಸ್ತಿ ಪುರಸ್ಕೃತರಾದ ಎ.ಎಸ್‌. ಪಾಟೀಲ ಅವರು ಅತಿಥಿಗಳನ್ನು ಸ್ವಾಗತಿಸಿ, ಸಂಸ್ಥೆಯ ನಡೆದು ಬಂದ ಹಾದಿ ಹಾಗೂ ಶೈಕ್ಷಣಿಕ ಸಾಧನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ನೇತ್ರಾವತಿ ಪುರೋಹಿತ ನೆರವೇರಿಸಿದರು. ಅತಿಥಿಗಳ ಪರಿಚಯವನ್ನು ರೇಖಾ ಬಿರಾದಾರ ಮಾಡಿದರು. ಕಾರ್ಯಕ್ರಮದ ಆರಂಭದಲ್ಲಿ ಕುರಾನ್ ಪಠಣ, ಭಗವದ್ಗೀತೆ, ಬಸವಣ್ಣನವರ ವಚನ ವಾಚನ ನಡೆಯಿತು. ಕಾನೂನು ವಿದ್ಯಾರ್ಥಿನಿ ವಂದನಾರೆ​‍್ಣ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ವಿಜಯಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್‌. ಹಾಗರಗಿ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಮಲ್ಲಿಕಾರ್ಜುನ ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಸೈಯದ್ ಅಬ್ಬಾಸ್ ಅಲಿ, ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ