ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಲೋಕದರ್ಶನ ವರದಿ
ಧಾರವಾಡ 25 : ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 79ನೇ ಹುಟ್ಟುಹಬ್ಬದ ಪ್ರಯುಕ್ತ ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಜೆಎಸ್ಎಸ್ ಮಂಜುನಾಥೇಶ್ವರ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು, ಮೃತ್ಯುಂಜಯ ನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಮೂಡಿಸುವ ಹಾಗೂ ಸಂವಿಧಾನಿಕ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ತಿಳುವಳಿಕೆ ನೀಡುವ ಉದ್ದೇಶದಿಂದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಲ್ಲಪ್ಪ ಮಹಾದೇವಪ್ಪ ಬಡಿಗೇರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳು, ಮಹಿಳೆಯರು ಹಾಗೂ ಮಕ್ಕಳ ಕಾನೂನು ರಕ್ಷಣೆ, ಮಾದಕ ದ್ರವ್ಯಗಳ ಬಳಕೆಯ ತಡೆ, ಉಚಿತ ಕಾನೂನು ನೆರವು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯವೈಖರಿಯ ಕುರಿತು ಮಾಹಿತಿ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಕುಮಾರಿ ಸೀರೀನ್ ಬಾನಿ, ವಕೀಲರು ಹಾಗೂ ನ್ಯಾಯ ಸಂವಿಧಾನ ಫೆಲೋ, ಧಾರವಾಡ ಇವರು ವಿದ್ಯಾರ್ಥಿಗಳಿಗೆ ದೈನಂದಿನ ಜೀವನದಲ್ಲಿ ಕಾನೂನಿನ ಅರಿವಿನ ಅಗತ್ಯತೆ, ಸಾಮಾಜಿಕ ಜವಾಬ್ದಾರಿ, ಮಾನವ ಹಕ್ಕುಗಳು, ಮಹಿಳಾ ಸಬಲೀಕರಣ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಪಾಲಿಸುವ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಾಚಾರ್ಯ ಡಾ. ಬಿ. ಎನ್ ಭಾವಿ ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಸೂಕ್ತ ತಿಳುವಳಿಕೆಯನ್ನು ಹೊಂದುವುದರ ಮೂಲಕ ಜವಾಬ್ದಾರಿಯುತ ನಾಗರಿಕರಾಗಬೇಕು ಮತ್ತು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಗೌರವಿಸಬೇಕು ಎಂದು ಸಂಪನ್ಮೂಲ ವ್ಯಕ್ತಿಗಳು ಕರೆ ನೀಡಿದರು. ಉಪನ್ಯಾಸಕರಾದ ಲೀಲಾವತಿ ಪಾಟೀಲ, ನಾಗರಾಜ ತೋಟಗೇರ ಶಿವಕುಮಾರ ತುರಮರಿಮಠ ಉಪಸ್ಥಿತರಿದ್ದರು.