ಧಾರವಾಡ - ಹುಬ್ಬಳ್ಳಿ

ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾನೂನು ಅರಿವು ಅಗತ್ಯ: ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್

ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾನೂನು ಅರಿವು ಅಗತ್ಯ: ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್

ಲೋಕದರ್ಶನ ವರದಿ 

ಧಾರವಾಡ 27: ಮಕ್ಕಳು ರಾಷ್ಟ್ರದ ದೊಡ್ಡ ಶಕ್ತಿಯಾಗಿದ್ದು, ಪ್ರತಿಯೊಂದು ಮಗುವನ್ನೂ ಗೌರವ ಮತ್ತು ಆದರದಿಂದ ಕಾಣಬೇಕು. ಮಕ್ಕಳಿಗೆ ಕಾನೂನುಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದ್ದು, ತರಬೇತಿ ಕಾರ್ಯಾಗಾರಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳ ಹಕ್ಕುಗಳು ಮತ್ತು ಕಾನೂನುಗಳ ಬಗ್ಗೆ ಸಮರ​‍್ಕ ತಿಳುವಳಿಕೆ ನೀಡಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜೆಜೆಸಿ ಮತ್ತು ಪೋಕ್ಸೋ ಸಮಿತಿ ಅಧ್ಯಕ್ಷ ಎಸ್‌. ಸುನಿಲ್ ದತ್ ಯಾದವ್ ಹೇಳಿದರು.  

ನಗರದ ಬೇಲೂರು ಕೈಗಾರಿಕಾ ಪ್ರದೇಶದ ವಾಟರ್ ಅಂಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಹಾಗೂ ನ್ಯಾಯ (ಎನ್ಜಿಒ) ಸಹಯೋಗದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಮಕ್ಕಳು, ಮಹಿಳೆಯರು, ಲೈಂಗಿಕ ಅಪರಾಧಗಳ ಸಂತ್ರಸ್ತರು, ವಿಕಲಚೇತನರು ಹಾಗೂ ಇತರೆ ಸೂಕ್ಷ್ಮ ವರ್ಗದವರ ಪ್ರಕರಣಗಳಲ್ಲಿ ಸಂತ್ರಸ್ತರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಕಾನೂನು ಪ್ರಕ್ರಿಯೆಯ ಗೌಪ್ಯತೆಯನ್ನು ಬೆಂಬಲ ವ್ಯಕ್ತಿಗಳು ಕಾಪಾಡಬೇಕು ಎಂದು ಹೇಳಿದರು.  

ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಡಾ. ಸ್ನೇಹಾ ಸಿ.ವಿ. ಮಾತನಾಡಿ, 15 ಮತ್ತು 16 ವರ್ಷದೊಳಗಿನ ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನುಬದ್ಧ ಶಿಕ್ಷೆ ವಿಧಿಸಿದರೆ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ. ಮಕ್ಕಳ ಭವಿಷ್ಯಕ್ಕೆ ಅಗತ್ಯ ಬೆಂಬಲ ಒದಗಿಸುವುದು ಮುಖ್ಯ ಎಂದು ತಿಳಿಸಿದರು.  

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಮಾತನಾಡಿ, ಮಕ್ಕಳ ರಕ್ಷಣೆ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿ ಅಲ್ಲ; ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಎಲ್ಲರೂ ಜಾಗೃತರಾಗಬೇಕು ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಟಿ. ನರೇಂದ್ರ ಪ್ರಸಾದ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌.ವಿ. ವಿಜಯ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು, ವಕೀಲರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ