ಶೈಕ್ಷಣಿಕ ಅರ್ಹತೆ ಹೊಂದಿದ ಗುಣಮಟ್ಟದ ಶಿಕ್ಷಕರಿಂದ ಪಾಠ: ಬಿಇಒ

Lessons from quality teachers with academic qualifications: BEO

ಹಾರೂಗೇರಿ 14: ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವಂತ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಜೊತೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕೆಂದು ರಾಯಬಾಗ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್‌. ಹೇಳಿದರು. 

ಅವರು ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಹಾರೂಗೇರಿ ಕ್ಲಸ್ಟರ್‌ನ ವಿವಿಧ ಶಾಲೆಗಳಿಗೆ ಹಾಗೂ ತೋಟದ ಮನೆಗಳಿಗೆ ಭೇಟಿ ನೀಡಿ, ಮಕ್ಕಳು ಹಾಗೂ ಪಾಲಕರಿಗೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲಾತಿ ಮಾಡುವಂತೆ ಮನವಿ ಮಾಡಿದ ಅವರು ಶೈಕ್ಷಣಿಕ ಅರ್ಹತೆ, ಅಪಾರ ಜ್ಞಾನ ಹೊಂದಿದ ಶಿಕ್ಷಕರು ಸರಕಾರಿ ಶಾಲೆಗಳಲ್ಲಿ ಇದ್ದು, ಅವರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕೆಂದರು.  

ಕನ್ನಡ ಮಾಧ್ಯಮ ಕಲಿತ ಅನೇಕ ಗ್ರಾಮೀಣ ಮಕ್ಕಳು ಇಂದು ನಾನಾ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಮೇ. 29ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆದುಕೊಳ್ಳಬೇಕೆಂದ ಬಿಇಒ ಬಸವರಾಜಪ್ಪ ಆರ್‌. ಅವರು ಸರಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ, ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನ ಬಿಸಿಯೂಟದಲ್ಲಿ ಪೌಷ್ಠಿಕ ಆಹಾರ ಸೇರಿದಂತೆ ಹಲವಾರು ಯೋಜನೆಗಳನ್ನು ಉಚಿತವಾಗಿ ನೀಡಲಾಗುತ್ತಿರುವುದಾಗಿ ತಿಳಿಸಿದರು.  

ಶಿಕ್ಷಣ ಸಂಯೋಜಕ ವಿಠ್ಠಳ ತೇರದಾಳೆ ಮಾತನಾಡಿ ಪಾಲಕರು ಸರಕಾರಿ ಶಾಲೆಗಳ ಬಗ್ಗೆ ಸಕಾರಾತ್ಮಕ ಆಲೋಚನೆ ಬೆಳೆಸಿಕೊಳ್ಳಬೇಕು. ಖಾಸಗಿ ಶಾಲೆಗಳನ್ನು ಮೀರಿಸುವಷ್ಟು ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಿದ್ದು, ಸರಕಾರಿ ಶಾಲೆಗಳಲ್ಲಿನ ಸೌಲಭ್ಯಗಳನ್ನು ಮಕ್ಕಳು ಸಮರ​‍್ಕವಾಗಿ ಬಳಸಿಕೊಂಡು, ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. 

ಸಿಆರ್‌ಪಿ ಮಹಾಂತೇಶ ಮುಗಳಖೋಡ, ಶಿಕ್ಷಕ, ಶಿಕ್ಷಕಿಯರು ಹಾಗೂ ಪಾಲಕರು ಉಪಸ್ಥಿತರಿದ್ದರು.