ತ್ಯಾಜ್ಯ ವಿಲೇವಾರಿ ಘಟಕಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ, ಪರಿಶೀಲನೆ
ಬೆಳಗಾವಿ, ಅ.30: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶುಕ್ರವಾರ ಬೆಳಗಾವಿ ನಗರದ ಜಲ ಶುದ್ಧೀಕರಣ ಘಟಕ ಹಾಗೂ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯಲಾಗುತ್ತಿರುವ ವಿವಿಧ ಬೆಳೆಗಳು ಹಾಗೂ ತರಕಾರಿಗಳ ವಿವರ, ವಾಯುಮಾಲಿನ್ಯ ವರದಿ, ಹಾಲಿನ ಗುಣಮಟ್ಟ, ಮಕ್ಕಳ ಆರೋಗ್ಯ ತಪಾಸಣಾ ವರದಿ, ನಾಯಿ ಕಡಿತ ಪ್ರಕರಣಗಳ ವಿವರ ಮತ್ತು ನೀರಿನ ಪರೀಕ್ಷಾ ವರದಿಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ತ್ಯಾಜ್ಯ ವಿಲೇವಾರಿ ಘಟಕದ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪ್ರದೇಶಗಳಲ್ಲಿ ನಾಯಿ ಕಡಿತಕ್ಕೆ ಒಳಗಾದವರ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಬೀದಿನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಹಾಗೂ ಈ ಕುರಿತು ಕೈಗೊಂಡ ಕ್ರಮಗಳ ವರದಿ ನೀಡುವಂತೆ ನಿರ್ದೇಶನ ನೀಡಿದರು.
ಇದೇ ವೇಳೆ, ತ್ಯಾಜ್ಯ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಸ್ಥರು ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಉಪಲೋಕಾಯುಕ್ತರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪನಿಬಂಧಕರಾದ ಅರವಿಂದ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.