ಎಂ.ಎಂ. ಪಾಟೀಲ್ ವಿದ್ಯಾರ್ಥಿಗಳ ಕ್ರೀಡಾ ಸಾಧನೆ,* ಏಳು ವಿಭಾಗಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ,
ಲೋಕದರ್ಶನ ವರದಿ
ಹೂವಿನಹಡಗಲಿ 10: ಪಟ್ಟಣದ ಎಂ.ಎಂ. ಪಾಟೀಲ್ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ತಾಲೂಕಿಗೆ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಅಕ್ಟೋಬರ್ 9ರಂದು ಹರಪನಹಳ್ಳಿಯಲ್ಲಿ ನಡೆದ ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ. 1500 ಮೀಟರ್ ಓಟ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಒಟ್ಟು ಏಳು ವಿಭಾಗಗಳಲ್ಲಿ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.
ಇದೇ ರೀತಿ, ಕೊಟ್ಟೂರಿನಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚೈತ್ರ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸಪೇಟೆಯಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ ಆಯ್ಕೆಯಾಗುವ ಮೂಲಕ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ದಾಸರಹಳ್ಳಿ ಸತೀಶ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಯಶಸ್ಸು ಸಾಧಿಸುವಂತೆ ಹಾರೈಸಿದ್ದಾರೆ.