ಹಿರೇಉಳ್ಳಿಗೇರಿ-ಚಿಕ್ಕಉಳ್ಳಿಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ
ಸವದತ್ತಿ 17 : ತಾಲೂಕಿನ ಹಿರೇಉಳ್ಳಿಗೇರಿ ಹಾಗೂ ಚಿಕ್ಕ ಉಳ್ಳಿಗೇರಿ ಗ್ರಾಮಗಳನ್ನು ಸಂಪರ್ಕಿಸುವ ಬಹುದಿನಗಳ ಬೇಡಿಕೆಯ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ವತಿಯಿಂದ 3 ಕೋಟಿ ವೆಚ್ಚದ ಚಿಕ್ಕಉಳ್ಳಿಗೇರಿ ಮುಖ್ಯ ರಸ್ತೆಯ ಕಿ.ಮೀ. 0.00 ರಿಂದ 4.00 ರವರೆಗೆ ಪ್ರಸ್ತಾಪಿತ ಕಿ.ಮೀ. 2.00 ರಿಂದ 4.00 ರವರೆಗೆ ಸುಧಾರಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಈ ರಸ್ತೆ ಅಭಿವೃದ್ಧಿಯು ಗ್ರಾಮಸ್ಥರ ಬಹುದಿನಗಳ ಕನಸಾಗಿತ್ತು. ಕಾಮಗಾರಿ ಪೂರ್ಣಗೊಂಡ ಬಳಿಕ ಸುತ್ತಮುತ್ತಲಿನ ಹಲವು ಗ್ರಾಮಗಳ ಸಾರ್ವಜನಿಕರಿಗೆ, ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವಾಹನ ಸವಾರರ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ವಿಶೇಷವಾಗಿ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಕಾಲಕ್ಕೆ ಮಾರುಕಟ್ಟೆಗೆ ಸಾಗಿಸಲು ಇದು ಸಹಕಾರಿಯಾಗಲಿದೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಬಲವರ್ಧನೆಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗದಂತೆ ನಿಗದಿತ ಕಾಲಮಿತಿಯೊಳಗೆ ರಸ್ತೆ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸಬೇಕು.
ಇದೇ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಅಬಿಯಂತರು ಪ್ರವೀಣ್ ಪಾಟೀಲ್, ಚಂದ್ರು ಶ್ಯಾಮರಾಯನವರ, ಬಿ.ಎಸ್. ಪಾಟೀಲ್, ಸೇರಿದಂತೆ ಹಿರೇಉಳ್ಳಿಗೇರಿ ಮತ್ತು ಚಿಕ್ಕ ಉಳ್ಳಿಗೇರಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.