ರೈತರ ಹೋರಾಟಕ್ಕೆ ಮಹಾಲಿಂಗಪುರ ಸ್ತಬ್ಧ
ಲೋಕದರ್ಶನ ವರದಿ
ಮಹಾಲಿಂಗಪುರ 31 : ಕಬ್ಬಿಗೆ ಪ್ರತಿ ಟನ್ಗೆ 5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಹಾಲಿಂಗಪುರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಶನಿವಾರ ಪಟ್ಟಣದ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ರೈತರ ಹೋರಾಟಕ್ಕೆ ಕೈಜೋಡಿಸಿದರು. ಚೆನ್ನಮ್ಮ ವೃತ್ತದಲ್ಲಿ ರೈತರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಬೆಂಬಲ ಸೂಚಿಸಿದರು. ಪಟ್ಟಣದ ಪ್ರಮುಖ ರಸ್ತೆಗಳು ಮತ್ತು ವಾಣಿಜ್ಯ ಪ್ರದೇಶಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. ಸೈದಾಪುರ, ಧವಳೇಶ್ವರ ಬ್ರಿಡ್ಜ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಪ್ರತಿಭಟನೆ ಮುಂದುವರಿಯಿತು.
ಬಂದ್ ಹಿನ್ನೆಲೆಯಲ್ಲಿ ಕೆಲವು ಬಸ್ಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸಿದ ಹೋರಾಟಕ್ಕೆ ವ್ಯಾಪಾರಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಒಗ್ಗಟ್ಟಿನ ಬೆಂಬಲ ನೀಡಿದ್ದು, ಮಹಾಲಿಂಗಪುರದಲ್ಲಿ ಬಂದ್ ಯಶಸ್ವಿಯಾಯಿತು.