ಅ. 17ರಂದು ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ
ಧಾರವಾಡ 15: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 17ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಯಾ ಇಲಾಖೆಗಳಲ್ಲಿ ಆಚರಿಸಿದ ನಂತರ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜರಗುವ ಜಿಲ್ಲಾ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅವರು ಹೇಳಿದ್ದಾರೆ.
ಅಕ್ಟೋಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ವಾಲ್ಮೀಕಿ ದೇವಸ್ಥಾನಕ್ಕೆ ತೆರಳಿ, ಮಾಲಾರೆ್ಣ ಮಾಡಲಾಗುವುದು. ಅಲ್ಲಿಂದ ಟೋಲ್ನಾಕಾ, ಲೈನ್ಬಜಾರ ಹನುಮಂತ ದೇವಸ್ಥಾನದ ಮಾರ್ಗವಾಗಿ ಬೂಸಪ್ಪ ಚೌಕ, ಕೆಸಿಸಿ ಬ್ಯಾಂಕ್, ವಿವೇಕಾನಂದ ಸರ್ಕಲ್ ಮಾರ್ಗವಾಗಿ, ಡಾ.ಪಾಟೀಲ ಪುಟ್ಟಪ್ಪ ಸಭಾಭವನದವರೆಗೆ ಮೆರವಣಿಗೆ ಸಾಗುವುದು.
ನಂತರ ಜ್ಯುಬ್ಲಿ ವೃತ್ತದಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾಽಽಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಮಾಲಾರೆ್ಣ ಮಾಡಲಾಗುವುದು, ನಂತರ ಬೆಳಿಗ್ಗೆ 11.30 ಗಂಟೆಗೆ ಡಾ.ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಚರಿಸಲಾಗುವುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಶುಭ ಅವರು ತಿಳಿಸಿದ್ದಾರೆ.