ಪೊಲೀಸ್ ಪರೀಕ್ಷೆ ಪಾರದರ್ಶಕವಾಗಿರಲಿ: ಜಿಲ್ಲಾಧಿಕಾರಿ

ಪೊಲೀಸ್ ಪರೀಕ್ಷೆ ಪಾರದರ್ಶಕವಾಗಿರಲಿ: ಜಿಲ್ಲಾಧಿಕಾರಿ   Make police exams transparent: Collector

ಲೋಕದರ್ಶನ ವರದಿ 

ಕಾರವಾರ 03 : ಜಿಲ್ಲೆಯಲ್ಲಿ ಸೆಪ್ಟಂಬರ್ 6 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಇಲಾಖೆಯ ಪೊಲೀಸ್ (ಸಿಎಆರಿ​‍್ಡಎಆರ್) ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿ ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಯನ್ನು ನೆಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   

ಜಿಲ್ಲೆಯಲ್ಲಿ ಪೊಲೀಸ್ ಹುದ್ದೆಗಳ ಪರೀಕ್ಷೆಯು ಕಾರವಾರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 1,309 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚಿಸಿದ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು.

ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ಗಳ ಕೊರತೆಯಾಗದಂತೆ ಮತ್ತು ಕೇಂದ್ರಗಳ ಸಮೀಪ ನಿಲುಗಡೆ ನೀಡುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾಗದಂತೆ ಎಚ್ಚರವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. ಪರೀಕ್ಷಾ ಪ್ರಾಧಿಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್ಕೋಡ್ ಮತ್ತು ನಿಷೇಧಿತ ವಸ್ತುಗಳ ಪರೀಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು.

ಆರೋಗ್ಯ ಇಲಾಖೆ ವತಿಯಿಂದ ಎಲ್ಲಾ ಕೇಂದ್ರಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಹೊರತುಪಡಿಸಿ ಇತರೇ ಯಾರಿಗೂ ಕೇಂದ್ರದೊಳಗೆ ಪ್ರವೇಶಿಸಲು ಅನುಮತಿಯಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶವಿಲ್ಲ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು, ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದರು. ಪರೀಕ್ಷಾ ಪ್ರಾಧಿಕಾರವು ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅದರಂತೆ ಯಾವುದೇ ರೀತಿಯ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ.

ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕಣ್ಗಾವಲು, ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು, ಡ್ರೆಸ್ ಕೋಡ್ನಂತೆ ಬಟ್ಟೆಗಳನ್ನು ಧರಿಸುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್‌. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಎಲ್ಲಾ ಅಧಿಕಾರಿಗಳು ಇದ್ದರು.