ಪೌಷ್ಟಿಕ ಆಹಾರ ಸೇವನೆಯಿಂದ ಅಪೌಷ್ಟಿಕತೆ ದೂರ: ಕೆ. ಅಜ್ಜಯ್ಯ
ಲೋಕದರ್ಶನ ವರದಿ
ಹೂವಿನಹಡಗಲಿ, ಅ. 01: ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಿಶ್ವ ಪೌಷ್ಟಿಕ ಆಹಾರ ದಿನಾಚರಣೆ ಅಂಗವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಹಾಯಕ ಸರ್ಕಾರಿ ಅಭಿಯೋಜಕ ಕೆ. ಅಜ್ಜಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಹೆಚ್ಚಾಗಿ ಕಂಡುಬರುತ್ತಿದ್ದು, ದೈನಂದಿನ ಆಹಾರದಲ್ಲಿ ಸಿರಿಧಾನ್ಯಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯ ಎಂದು ಹೇಳಿದರು.
ವಿಶ್ವ ಪೌಷ್ಟಿಕ ಆಹಾರ ದಿನಾಚರಣೆಯ ಮಹತ್ವ ಹಾಗೂ ಇತಿಹಾಸದ ಕುರಿತು ಮಾಹಿತಿ ನೀಡಿದ ಅವರು, ಭಾರತೀಯ ಸಂವಿಧಾನದ ಆಶಯದಂತೆ ಪೌಷ್ಟಿಕ ಆಹಾರ ಸೇವನೆಯನ್ನು ಉತ್ತೇಜಿಸುವ ಅಗತ್ಯವಿದೆ ಎಂದರು.
ಸಿಡಿಪಿಒ ಜೆ. ರೇಣುಕಮ್ಮ ಅವರು ಪೌಷ್ಟಿಕ ಆಹಾರದ ಮಹತ್ವ ಹಾಗೂ ಅದರ ಹಿನ್ನೆಲೆಯ ಕುರಿತು ವಿವರಿಸಿದರು.
ವಕೀಲ ಹನುಮಂತಪ್ಪ ಗದಗ ಅವರು ವರದಕ್ಷಿಣೆ ನಿಷೇಧ ಕಾಯ್ದೆ, ವರದಕ್ಷಿಣೆಯಿಂದ ಮಹಿಳೆಯರ ಮೇಲಾಗುವ ಪರಿಣಾಮಗಳು, ವರದಕ್ಷಿಣೆ ವಿರೋಧಿ ಪ್ರಕರಣಗಳ ದಾಖಲಾತಿ ಹಾಗೂ ಪೌಷ್ಟಿಕ ಆಹಾರದಲ್ಲಿ ಮಹಿಳೆಯರ ಪಾತ್ರದ ಕುರಿತು ಮಾಹಿತಿ ನೀಡಿದರು.
ಹಿರಿಯ ವಕೀಲ ಅಡವಾಳಗಿ ಕೋಟ್ರೇಶ್ ಅವರು ಪೌಷ್ಟಿಕ ಆಹಾರವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ನಿಯಮಾನುಸಾರ ವಿತರಿಸುವುದರ ಮಹತ್ವವನ್ನು ವಿವರಿಸಿ, ಗ್ರಾಮೀಣ ಮಟ್ಟದಲ್ಲಿ ಪೌಷ್ಟಿಕತೆಯ ಮೂಲಕ ಸಮುದಾಯದ ಆರೋಗ್ಯ ಮತ್ತು ಸಾಮಾಜಿಕ ಪ್ರಗತಿ ಸಾಧಿಸಬಹುದು ಎಂದರು.
ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಹೇಮಾದ್ರಿ ನಾಯಕ್, ತಾಲೂಕು ಆರೋಗ್ಯಾಧಿಕಾರಿ ಶಿವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹನುಮಕ್ಕ ಕಾರ್ಯಕ್ರಮ ನಿರೂಪಿಸಿದರು.