ಅಲ್ಬೆಂಡಜೋಲ್ ಮಾತ್ರೆ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು: ಡಾ. ಪ್ರಭಾಕರ ಕುಂದೂರ

ಅಲ್ಬೆಂಡಜೋಲ್ ಮಾತ್ರೆ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು: ಡಾ. ಪ್ರಭಾಕರ ಕುಂದೂರ  Malnutrition and anemia can be prevented by taking Albendazole tablets: Dr. Prabhakar Kundur

ಲೋಕದರ್ಶನ ವರದಿ   

                                                     19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ

ಹಾವೇರಿ, ಆ.11: 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ತಪ್ಪದೇ ಜಂತುಹುಳು ನಿವಾರಕ ಅಲ್ಬೆಂಡಜೋಲ್ ಮಾತ್ರೆ ಸೇವಿಸಬೇಕು. ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಲ್ಲಿ ಮಕ್ಕಳಿಗೆ ಮಾತ್ರೆ ವಿತರಿಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.  

ಇಜಾರಿಲಕಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ತಾಲೂಕಿನಲ್ಲಿ ಆ.10ರಿಂದ ಆ.17ರವರೆಗೆ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ನಡೆಯುತ್ತಿದೆ. ಯಾವುದೇ ಮಗು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ಸಂಬಂಧಪಟ್ಟವರು ಕ್ರಮವಹಿಸಬೇಕು. ಜಂತುಹುಳು ನಿವಾರಕ ಮಾತ್ರೆ ಸೇವಿಸುವುದರಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟುವುದರ ಜೊತೆಗೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.  

ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಂಗನವಾಡಿ ಕೇಂದ್ರಗಳು, ಕ್ಷೇತ್ರಮಟ್ಟದ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಜಂತುಹುಳು ನಿವಾರಕ ಮಾತ್ರೆ ನೀಡಲಾಗುತ್ತಿದೆ. 1ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳ ಪಾಲಕರು ತಮ್ಮ ಮಕ್ಕಳಿಗೆ ಮಾತ್ರೆ ಕೊಡಿಸುವಂತೆ ಅವರು ಮನವಿ ಮಾಡಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ವಹಿಸಿದ್ದರು. ಕಾರ್ಯಕ್ರಮ ವ್ಯವಸ್ಥಾಪಕ ರವಿ ಜೆ.ಬಿ., ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಸಾತೇನೂರ ಪರಶುರಾಮ, ಪ್ರಭಾರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಆರೋಗ್ಯ ನೀರೀಕ್ಷಣಾಧಿಕಾರಿ ಸತೀಶ್ ಯತ್ತಿನಮನಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಿ.ಎಸ್‌. ಶಿಂಧೆ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಬಿ.ಸಿ. ಹನುಮಗೌಡರ, ಮಹಾದೇವಪ್ಪ, ಶಿವಕುಮಾರ, ಮುಖ್ಯೋಪಾಧ್ಯಾಯ ವಿ.ಎಸ್‌. ಮಡ್ಲಿಮಠ, ಮಾಲತೇಶ ಕಮ್ಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.