ಜುಲೈ 21ರಂದು ಹಾವೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಮಲ್ಲಿಕಾರ್ಜುನ ಬಳ್ಳಾರಿ

ಜುಲೈ 21ರಂದು ಹಾವೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ಮಲ್ಲಿಕಾರ್ಜುನ ಬಳ್ಳಾರಿ Massive farmers' protest in Haveri on July 21: Mallikarjun Ballari

ಬ್ಯಾಡಗಿ, ಜು.16: ರಾಜ್ಯ ಹಾಗೂ ಹಾವೇರಿ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜುಲೈ 21ರಂದು ಹಾವೇರಿಯ ಮೈಲಾರ ಮಹಾದೇವ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ.  

ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಮನವಿ ಸಲ್ಲಿಸಿ ಮಾತನಾಡಿದ ಅವರು, ರೈತರು ಸಾಲ ಮಾಡಿ ಎರಡು ಬಾರಿ ಬಿತ್ತನೆ ಮಾಡಿದರೂ ಮಳೆಯ ಅಭಾವದಿಂದ ಬೆಳೆ ಹಾನಿಗೊಳಗಾಗಿದೆ. ಸಾಲದ ಹೊರೆ ತಾಳಲಾರದೆ ಕೆಲ ರೈತರು ಆತ್ಮಹತ್ಯೆಯಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.  

ಜುಲೈ 21ರೊಳಗೆ ಹಾವೇರಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಸಾವಿರಾರು ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  

ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಗಮನಿಸಿ, ಕೃಷಿ ಸಾಲ ಮನ್ನಾ ಮಾಡಿ ರೈತರ ಜೀವ ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಬೆಳೆ ವಿಮೆ ನೋಂದಣಿಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಹಾಗೂ ಸೇವಾ ಕೇಂದ್ರಗಳಲ್ಲಿ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಬೆಳೆ ವಿಮೆ ತುಂಬಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.  

ತಾಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಮಾತನಾಡಿ, ಸಹಕಾರಿ ಸಂಘಗಳಲ್ಲಿ ಬೆಳೆ ಸಾಲ ಪಡೆದ ರೈತರಿಗೆ ವಿಮೆ ಪಾವತಿಯಲ್ಲಿ ಇರುವ ಗೊಂದಲವನ್ನು ಸರ್ಕಾರ ತಕ್ಷಣ ನಿವಾರಿಸಬೇಕು. ರೈತರಿಗೆ ಅವರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಬೆಳೆ ವಿಮೆ ಪಡೆಯಲು ಅವಕಾಶ ನೀಡುವಂತೆ ಕೆಸಿಸಿ ಬ್ಯಾಂಕ್ಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.  

ರೈತ ಮುಖಂಡ ಗಂಗಣ್ಣ ಎಲಿ ಮಾತನಾಡಿ, ಆಣೂರು ಏತ ನೀರಾವರಿ ಯೋಜನೆಯ ಬಾಂದಾರು ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.  

ಪ್ರತಿಭಟನೆಯಲ್ಲಿ ತಾಲೂಕು ಘಟಕದ ಅಧ್ಯಕ್ಷರಾದ ಚಿಕ್ಕಪ್ಪ ಚತ್ರದ, ಕೆ.ವಿ. ದೊಡ್ಡಗೌಡ್ರ, ಶಿವರುದ್ರ​‍್ಪ ಮೂಡೇರ, ಫಕೀರೇಶ ಅಜ್ಜಗೊಂಡರ, ಮೌನೇಶ್ ಕಮ್ಮಾರ, ಜಾನ್ ಪುನೀತ್ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ರೈತರು ಉಪಸ್ಥಿತರಿದ್ದರು.