ಸಂವಿಧಾನ ದಿನದಂದು ಎಸ್ಐಆರ್ ವಿರುದ್ಧ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ
ವಿಜಯಪುರ 26: ಸಂವಿಧಾನ ದಿನದ ಅಂಗವಾಗಿ ಕೇಂದ್ರ ಸರ್ಕಾರದ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಎದ್ದೇಳು ಕರ್ನಾಟಕ, ಹೋರಾಟ ಸಮಿತಿ, ಮತ ಕಾವಲು ಸಮಿತಿ ಹಾಗೂ ವಿವಿಧ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯ ಹೋರಾಟಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿ,
ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಧ್ವನಿ ಎತ್ತಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಸಂಘಟನೆಗಳ ಮುಖಂಡರಾದ ಪ್ರಭುಗೌಡ ಪಾಟೀಲ ಅವರು, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಮತದಾನದ ಹಕ್ಕನ್ನು ಎಸ್ಐಆರ್ ಪ್ರಕ್ರಿಯೆಯ ಮೂಲಕ ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇಂತಹ ಕ್ರಮಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಯಿತು:
ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು. ಮತದಾರರಿಗೆ ಅನ್ಯಾಯವಾಗುವ ಖಋ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು.ಚುನಾವಣಾ ಆಯೋಗದ ಕಾಯ್ದೆಯ ಸೆಕ್ಷನ್ 23ಕ್ಕೆ ಮಾಡಿರುವ 2023ರ ತಿದ್ದುಪಡಿಯನ್ನು ಹಿಂಪಡೆಯಬೇಕು.
ನಂತರ ಮಾತನಾಡಿದ ಸುರೇಶ್ ಜಿ.ಬಿ. ಅವರು, ಖಋ ಪ್ರಕ್ರಿಯೆಯಲ್ಲಿನ ಲೋಪದೋಷಗಳು ಮತ್ತು ಗೊಂದಲಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಈ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿದರು. ಚುನಾವಣಾ ಆಯೋಗ ಇದೀಗ ಎಸ್ಎಸ್ಆರ್ ಕುರಿತು ಮಾತನಾಡುತ್ತಿರುವುದು ಎಸ್ಐಆರ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಭಿಪ್ರಾಯಪಟ್ಟರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರವನ್ನುಶ್ರೀ ಬಾಲು ಜೇವರ ಅವರು ಓದಿದರು. ಇದೇ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಅಜಮನಿ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ ಸಂವಿಧಾನದ ಮೌಲ್ಯಗಳು, ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಆಶಯಗಳನ್ನು ಸ್ಮರಿಸಿದರು. ಈ ಪ್ರತಿಭಟನೆಯಲ್ಲಿ ಫಯಾಜ್ ಕಲಾದಗಿ,
ಅಬ್ದುಲ್ ಖಾದೀರ್, ಅಕ್ರಮ್ ಮಶಾಲ್ಕರ್, ಬಾಲು ಜೇವರ, ಶಮ್ಸುದ್ದೀನ್, ಹಮೀದಾ ಪಟೇಲ್, ಅಕ್ಷಯ್ ಕುಮಾರ್ ಅಜಮನಿ, ಮಲ್ಲಿಕಾರ್ಜುನ ಬಟಗಿ, ವಸಂತ ಬಾಳಂದಗಿ, ಎಹ್ಸಾನುಲ್ಲಾ, ಆಕಿಬ್ ರಝಾ, ಮುರ್ತಝಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಂವಿಧಾನ ನೀಡಿರುವ ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಹಕ್ಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಎಸ್ಐಆರ್ ವಿರುದ್ಧದ ಹೋರಾಟವನ್ನು ಬೇಡಿಕೆಗಳು ಈಡೇರುವವರೆಗೂ ನಿರಂತರವಾಗಿ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಸಂಕಲ್ಪ ವ್ಯಕ್ತಪಡಿಸಿದರು.