ವಿಜಯಪುರ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಬೀದರ್‌ದಲ್ಲಿ ಬಿಜೆಪಿಯಿಂದ ಬೃಹತ್‌ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಬೀದರ್‌ದಲ್ಲಿ ಬಿಜೆಪಿಯಿಂದ ಬೃಹತ್‌ಪ್ರತಿಭಟನೆ

         ಬಿದರ/ಮನ್ನಾಏಖೇಳ್ಳಿ 24: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ, ರೈತರ ಸಮಸ್ಯೆಗಳ ನಿರ್ಲಕ್ಷ್ಯ, ಕಬ್ಬು ಬೆಳೆಗಾರರ ಬೇಡಿಕೆಗಳ ಈಡೇರಿಕೆಯಲ್ಲಿ ವಿಳಂಬ ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಖಂಡಿಸಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

          ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಖಂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  

         ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ನಂತರ ಜನರ ನೀರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ರೈತರು, ಬಡವರು, ಕಾರ್ಮಿಕರು ಹಾಗೂ ಸಾಮಾನ್ಯ ಜನರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ಸರ್ಕಾರ ಆಡಳಿತದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಟೀಕಿಸಿದರು.

             ವಿಶೇಷವಾಗಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪ್ರಸ್ತಾಪಿಸಿದ ಶಾಸಕರು, ರೈತರು ಹಗಲಿರುಳು ಶ್ರಮಪಟ್ಟು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ದೊರೆಯದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಕಬ್ಬು ಬೆಳೆಗಾರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

           ರೈತರ ಶ್ರಮಕ್ಕೆ ತಕ್ಕ ಬೆಲೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.ರೈತರ ಬದುಕು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕಾದ ಸರ್ಕಾರ ಮೌನ ವಹಿಸಿರುವುದು.

         ಸರಿಯಲ್ಲ. ರೈತರ ಬೆಳೆಗಳಿಗೆ ಸೂಕ್ತ ಬೆಲೆ, ಕೃಷಿಗೆ ಅಗತ್ಯ ಸೌಲಭ್ಯಗಳು, ಸಮರ​‍್ಕ ವಿದ್ಯುತ್ ಪೂರೈಕೆ ಹಾಗೂ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

            ಪ್ರತಿಭಟನೆಯಲ್ಲಿ ಬಿಜೆಪಿ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು, ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

           ರೈತರ ಹಿತಾಸಕ್ತಿ, ಜನಸಾಮಾನ್ಯರ ನ್ಯಾಯ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂಬ ಸಂದೇಶವನ್ನು ಪ್ರತಿಭಟನೆಯ ಮೂಲಕ ಸಾರಲಾಯಿತು. 


ಸುದ್ದಿ ಓದಿ