ವಿಜಯಪುರ

ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮೇಯರ್ ಎಂ.ಎಸ್‌. ಕರಡಿ ಅಧಿಕಾರಿಗಳಿಗೆ ಸೂಚನೆ

ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮೇಯರ್ ಎಂ.ಎಸ್‌. ಕರಡಿ ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ 

ವಿಜಯಪುರ.21: ನಗರದ ಪ್ರಮುಖ ರಾಜಕಾಲುವೆಗಳು, ಒಳಚರಂಡಿಗಳು ಹಾಗೂ ಮಳೆ ನೀರು ಹರಿವಿನ ಮಾರ್ಗಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಮಹಾನಗರ ಪಾಲಿಕೆ ಮೇಯರ್ ಎಂ.ಎಸ್‌. ಕರಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರ ವ್ಯಾಪ್ತಿಯಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಪಾಲಿಕೆಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ನೀರು ನಿಲ್ಲುವ ಪ್ರದೇಶಗಳಲ್ಲಿ ಅಗತ್ಯ ಪಂಪ್ ಸೆಟ್ ಗಳನ್ನು ಸಿದ್ಧವಾಗಿಡಬೇಕು. ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಮೇಯರ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. 

ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ವಿದ್ಯುತ್ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದರು.  ಸಾರ್ವಜನಿಕರು ಮಳೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕು. ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ: 08352-222474 ಸಂಪರ್ಕಿಸಲು ಮೇಯರ್ ಮನವಿ ಮಾಡಲಾಯಿತು. ಸಭೆಯಲ್ಲಿ ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಜಲಾವೃತ ಪ್ರದೇಶಗಳು, ಮಳೆ ನೀರಿನ ಹರಿವು, ಚರಂಡಿ ಸ್ವಚ್ಛತೆ, ರಸ್ತೆ ಹಾನಿ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ