ಕೋಪ್ಪಳ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮೆಹಬೂಬ್ ಖಾನ್ ನೇಮಕ
ಕೊಪ್ಪಳ, 6: ಬಹುಜನ ಸಮಾಜವಾದಿ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಶ್ರಮಿಸುತ್ತಿರುವ ಮೆಹಬೂಬ್ ಖಾನ್ ಅವರಿಗೆ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಬಡ್ತಿ ನೀಡಿ, ಕೊಪ್ಪಳ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಅವರ ಶಿಫಾರಸಿನ ಮೇರೆಗೆ ಪಕ್ಷದ ಕೇಂದ್ರ ರಾಜ್ಯ ಉಸ್ತುವಾರಿ ದಿನೇಶ್ ಗೌತಮ್ ಜಿ. ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಪಕ್ಷದ ವಿವಿಧ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಮೆಹಬೂಬ್ ಖಾನ್ ಅವರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆ ಬಲಪಡಿಸಲು ಶ್ರಮಿಸುತ್ತಿರುವುದನ್ನು ಪರಿಗಣಿಸಿ, ಅವರಿಗೆ ಲೋಕಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷ ತಿಳಿಸಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಲಬುರಗಿ ವಲಯ ಉಸ್ತುವಾರಿ ಆರ್.ಎಲ್. ಭೋಸಲೆ, ರಾಜ್ಯ ಕಾರ್ಯದರ್ಶಿ ಬಸವರಾಜ ಸೇರಿದಂತೆ ಹಲವು ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೆಹಬೂಬ್ ಖಾನ್ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿರುವುದಕ್ಕೆ ಕ್ಷೇತ್ರದ ಬಿಎಸ್ಪಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.