ರೈತರ ಮನವಿಗೆ ಸ್ಪಂದಿಸಿದ ಸಚಿವರು
ಇಂಡಿ 01: ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಇಂಡಿ ಹಾಗೂ ಚಡಚಣ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 10ನೇ ದಿನಕ್ಕೆ ಕಾಲಿಟ್ಟಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಭೀಮಸೇನ್ ಕೋಕರೆ ಅವರ ನೇತೃತ್ವದಲ್ಲಿ ನಿಯೋಗವು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಐಸಿಸಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರನ್ನು ಭೇಟಿಯಾಗಿ ನೀರಾವರಿ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗೂ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟಿತು. ರೈತರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಮುಖ್ಯ ಎಂಜಿನಿಯರ್ಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯ ಸಮಿತಿ ಸದಸ್ಯ ಗುರುನಾಥ್ ಬಗಲಿ, ಉತ್ತರ ಪ್ರಾಂತದ ಉಪಾಧ್ಯಕ್ಷ ಮಲ್ಲನಗೌಡ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.