ಬೆಳಗಾವಿ

ಬೆಳಗಾವಿ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಎಸ್‌ಸಿ, ಎಸ್‌ಟಿ ಮಾಸಿಕ ಕುಂದುಕೊರತೆ ಸಭೆ

ಬೆಳಗಾವಿ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಎಸ್‌ಸಿ, ಎಸ್‌ಟಿ ಮಾಸಿಕ ಕುಂದುಕೊರತೆ ಸಭೆ

ಬೆಳಗಾವಿ : ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮುಖಂಡರು ಹಾಗೂ ಸದಸ್ಯರ ಮಾಸಿಕ ಕುಂದುಕೊರತೆ ಸಭೆಯು ಗುರುವಾರ ಸಂಜೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯಲ್ಲಿ ಸುಮಾರು 100ರಿಂದ 120 ಜನ ಎಸ್‌ಸಿ, ಎಸ್‌ಟಿ ಮುಖಂಡರು ಹಾಗೂ ಸದಸ್ಯರು ಭಾಗವಹಿಸಿ, ತಮ್ಮ ವಿವಿಧ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತಂದರು. ಸಭೆಯಲ್ಲಿ ಪ್ರಸ್ತಾಪಿಸಲಾದ ಎಲ್ಲ ಸಮಸ್ಯೆಗಳನ್ನು ಪೊಲೀಸ್ ಆಯುಕ್ತರು ಸುದೀರ್ಘವಾಗಿ ಆಲಿಸಿದರು.

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ತಕ್ಷಣ ಪರಿಹರಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದರು. ಇನ್ನುಳಿದಂತೆ ಇತರ ಇಲಾಖೆಗಳ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಪತ್ರದ ಮೂಲಕ ತಂದು, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಸಭೆಯಲ್ಲಿ ನಗರದ ಡಿಸಿಪಿ ನಾರಾಯಣ ಭರಮನಿ (ಕಾ. ಮತ್ತು ಸು.) ಹಾಗೂ ಡಿಸಿಪಿ ನಿರಂಜನ (ಅ. ಮತ್ತು ಸಂ.) ಸೇರಿದಂತೆ ಎಲ್ಲ ಉಪವಿಭಾಗಗಳ ಎಸಿಪಿಗಳು, ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್‌ಪೆಕ್ಟರ್‌ಗಳು, ಡಿಸಿಆರ್‌ಇ ಪೊಲೀಸ್ ಠಾಣೆಯ ಅಧಿಕಾರಿಗಳು, ಕಂದಾಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎಸ್‌ಸಿ, ಎಸ್‌ಟಿ ಸಮುದಾಯದ ಮುಖಂಡರು ಮತ್ತು ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಭೆ ನಡೆಯಿತು.

ಸುದ್ದಿ ಓದಿ