ಮುಂದಗೋಡ

ಮುಂಡಗೋಡು: ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ

ಮುಂಡಗೋಡು: ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನಕ್ಕೆ ಚಾಲನೆ

ಕಾರವಾರ 03:  ಗ್ರಾಮಗಳ ಅಭ್ಯುದಯವನ್ನು ಗುರಿಯಾಗಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹತ್ತಾರು  ಯೋಜನೆಗಳು ಜಾರಿಯಲ್ಲಿದ್ದರೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪಾತ್ರ ಮಹತ್ವದ್ದಾಗಿದ್ದು, ಗ್ರಾಮೀಣಾಭಿವೃದ್ಧಿ ಕನಸು ಮನರೇಗಾ ಯೋಜನೆಯಿಂದ ಸಾಕಾರವಾಗಿದೆ ಎಂದು ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ ಹೇಳಿದರು.  

ಅಚರು ಗುರುವಾರ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ಆವರಣದಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಸುವ ನಿಟ್ಟಿನಲ್ಲಿ ಯೋಜನೆಯ ಬಗ್ಗೆ ವ್ಯಾಪಕ ಜನಜಾಗೃತಿ ಮತ್ತು ಕಾಮಗಾರಿ ಬೇಡಿಕೆ ಸಂಗ್ರಹಿಸುವ ನಿಟ್ಟಿನಲ್ಲಿ ಆರಂಭಿಸಲಾದ "ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ" ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.  

ಹಳ್ಳಿ ಜನರಿಗೆ ಸ್ವಗ್ರಾಮದಲ್ಲಿ ಉದ್ಯೋಗ ಅವಕಾಶವಿರದೆ ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ವಾರ್ಷಿಕ 100 ದಿನಗಳ ಕೆಲಸ ಒದಗಿಸಲು ಯೋಜನೆ ಸಹಕಾರಿಯಾಗಿದೆ. ಲಿಂಗ ತಾರತಮ್ಯವಿಲ್ಲದೇ ಎಲ್ಲರಿಗೂ ಸಮಾನ ಕೂಲಿ ಮಾತ್ರವಲ್ಲದೇ ಫಲಾನುಭವಿಯ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಇದರಿಂದ ಕೂಲಿ ಹಣಕ್ಕಾಗಿ ಕಛೇರಿಗೆ ಅಲೆದಾಡುವ ತೊಂದರೆಯಿಲ್ಲ ಎಂದರು. 

ಬಳಿಕ ಮನೆ ಮನೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇರುವ ಸೌಲಭ್ಯಗಳ ಮಾಹಿತಿಯುಳ್ಳ ಕರಪತ್ರಗಳನ್ನು ನೀಡಿ, ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕುರಿ ಶೆಡ್, ಬಚ್ಚಲುಗುಂಡಿ, ಕೋಳಿ ಶೆಡ್, ಎರೆಹುಳು ಘಟಕ, ತೆರೆದ ಬಾವಿ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಯಿತು.  

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಫಕ್ಕೀರವ್ವ ಮಲ್ಲಿಕಾರ್ಜುನ ಪಾಟೀಲ್, ಸದಸ್ಯರಾದ ಸಂತೋಷ ಸಣಮನಿ, ಬಾಚಣಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸನ್ನ ಟಿ.ಸಿ., ಚವಡಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣಪತಿ ಪಿಲ್ಲೋಜಿ, ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಗ್ರಾಮ ಪಂಚಾಯತ್ ಸಿಬ್ಬಂದಿ, ಬಿಎಫ್‌ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. 

ಸುದ್ದಿ ಓದಿ