ಮೇಜರ್ ಧ್ಯಾನಚಂದ್ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಮೇಜರ್ ಧ್ಯಾನಚಂದ್ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ  National Sports Day celebrated to mark the birth anniversary of Major Dhyan Chand

ಲೋಕದರ್ಶನ ವರದಿ 

ಧಾರವಾಡ 29: ನಗರದ ಪ್ರತಿಷ್ಠಿತ ಕರ್ನಾಟಕ ಪ್ರೌಢಶಾಲೆಯಲ್ಲಿ ಭಾರತದ ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನಚಂದ್ ಅವರ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಎನ್‌. ಎನ್‌. ಸವಣೂರ ಅವರು, ಭಾರತದ ಕ್ರೀಡಾ ಕ್ಷೇತ್ರಕ್ಕೆ ಮೇಜರ್ ಧ್ಯಾನಚಂದ್ ಅವರು ನೀಡಿರುವ ಅಪಾರ ಕೊಡುಗೆಯನ್ನು ಸ್ಮರಿಸಿದರು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನ ಮನೋಭಾವದಿಂದ ಸ್ವೀಕರಿಸುವ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು.

ಕ್ರೀಡೆಯು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಪ್ರಕಾಶ್ ಬೋಂಗಾಳೆ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಜೀವನದಲ್ಲಿ ಕ್ರೀಡೆ ಮತ್ತು ವ್ಯಾಯಾಮಕ್ಕೆ ಮಹತ್ವ ನೀಡಬೇಕು. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಶಿಸ್ತು, ಸಹಕಾರ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ  ರಮೇಶ ಮೂಲಿಮನಿ, ಕೆ. ಸಿ. ಪ್ರಕಾಶ, ಮಂಜುಳಾ ಕೋಳಿವಾಡ, ಶೋಭಾದೇವಿ, ಪದ್ಮಾ ಅಂಗಡಿ, ರಮೇಶ ಪಡ್ನೂರು, ವೀಣಾ ಪಾಟೀಲ ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ ಸಹನಾ ಅಂಗಡಿ, ಮೇಜರ್ ಧ್ಯಾನಚಂದ್ ಅವರನ್ನು ಕುರಿತು ಮಾತನಾಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯು ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.