ನ.28 ರಂದು ನವೋದಯ 6ನೇ ತರಗತಿ ಪ್ರವೇಶ ಪರೀಕ್ಷೆ : ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚನೆ
ಲೋಕದರ್ಶನ ವರದಿ
ಹಾವೇರಿ 23: ಜವಾಹರ ನವೋದಯ ವಿದ್ಯಾಲಯದ 2027-28ನೇ ಸಾಲಿನ 6ನೇ ತರಗತಿ ಆಯ್ಕೆ ಪರೀಕ್ಷೆ ಜಿಲ್ಲೆಯ ಏಳು ತಾಲೂಕುಗಳ 37 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 28 ರಂದು ಜರುಗಲಿದ್ದು, ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಎಲ್ಲರೂ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಯಶಸ್ವಿಯಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷೆ ಬಹಳ ಸೂಕ್ಷ್ಮವಾಗಿದೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು, ವೀಕ್ಷಕರು, ಸ್ಕಾ-್ವಡ್‌ಗಳು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಸಿಬ್ಬಂದಿ ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕೆಲಸಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಿಸಿ ಟಿವಿ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ ಅಳವಡಿಕೆ ಕಡ್ಡಾಯವಾಗಿದೆ. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದರು.
ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ:
ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
200 ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಫ್ರಿಸ್ಕಿಂಗ್ ಮಾಡಲಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮೊದಲು ಅವರ ತಪಾಸಣೆ ನಡೆಸಬೇಕು.
ಸೂಚನಾ ಫಲಕ ಅಳವಡಿಸಿ: ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ತರಳಲು ಅನುಕೂಲವಾಗುವಂತೆ ಯಾವ ಕೊಠಡಿಯಲ್ಲಿ ಪ್ರವೇಶ ಪತ್ರ ಸಂಖ್ಯೆ ಅನುಕ್ರಮ ನಂಬರ ಹಾಗೂ ಕೊಠಡಿ ಸಂಖ್ಯೆಗಳ ಸೂಚನಾ ಫಲಕಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ಅವರ ಪ್ರವೇಶ ಪತ್ರದ ನಂಬರ ಇರುವ ಕೊಠಡಿಗೆ ತೆರಳಲು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೇಂದ್ರಕ್ಕೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ವ್ಯಕ್ತಿಗಳಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದರು.
ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಕುರಿನ ಥೊಮಸ್ ಅವರು ಮಾತನಾಡಿ, ಜಿಲ್ಲೆಯಲ್ಲಿ 4,404 ಬಾಲಕ ಮತ್ತು 3324 ಬಾಲಕಿಯರು ಸೇರಿ 8565 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 3324 ವಿದ್ಯಾರ್ಥಿಗಳು ಗ್ರಾಮೀಣ ಹಾಗೂ 5241 ವಿದ್ಯಾರ್ಥಿಗಳು ನಗರ ಪ್ರದೇಶದವರಾಗಿದ್ದಾರೆ ಎಂದರು ಹಾಗೂ ಪರೀಕ್ಷಾ ಮಾರ್ಗಸೂಚಿಗಳನ್ನು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇತರರು ಉಪಸ್ಥಿತರಿದ್ದರು.